ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ಸ್ಮಶಾನಗಳಿಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿದೆ ಈ ಬಗ್ಗೆ ತಕ್ಷಣ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್ ಮೈಸೂರು, ತಾಲ್ಲೂಕು ಪಂಚಾಯತ್ ನಂಜನಗೂಡು ಸಂಯುಕ್ತ ಆಶ್ರಯದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಈ ಸೂಚನೆ ನೀಡಿದರು.
ವರುಣ ವಿಧಾನಸಭಾ ಕ್ಷೇತ್ರ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಎಲ್ಲಾ ಜನಾಂಗದ ಸ್ಮಶಾನಗಳಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆಗಳಲ್ಲಿ ದಿನನಿತ್ಯ ದೂರು ಬರುತ್ತಿದೆ. ಈ ಬಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
ಈ ಹಿಂದೆ ಶವವನ್ನು ಹೂಳುತ್ತಿದ್ದ ಜಾಗವನ್ನೇ ವಸಪಡಿಸಿಕೊಂಡು ಸ್ಮಶಾನಭೂಮಿಯನ್ನು ನೀಡಬೇಕು. ಯಾವುದೇ ಗ್ರಾಮಗಳಲ್ಲಿ ಸ್ಮಶಾನ ಇಲ್ಲ ಎಂದು ದೂರು ಬಂದರೆ ಸುಮ್ಮನಿರುವುದಿಲ್ಲ ಎಂದು ತಹಶೀಲ್ದಾರ್ ಗೆ ಎಚ್ಚರಿಕೆ ನೀಡಿದರು.
ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮಳೆ ಹಾನಿ ಸಂದರ್ಭದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರದಲ್ಲೇ ಪರಿಹಾರ ಒದಗಿಸಿಕೊಡಬೇಕು. ಶೇ.50 ರಿಂದ 60 ಭಾಗ ಹಾನಿಯಾಗಿದ್ದರೂ ಪೂರ್ಣ ಪ್ರಮಾಣದ ಪರಿಹಾರ ಕೊಡಿಸಬೇಕು ಎಂದು ಡಾ.ಯತೀಂದ್ರ ಸೂಚಿಸಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ತಾಲ್ಲೂಕಿನಲ್ಲಿ ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಸಾಕಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳು ರಿಪೇರಿಯಲ್ಲಿವೆ.
ಹಳೆಯ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಮಧ್ಯಪಾನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ದೇವಸ್ಥಾನದ ಸುತ್ತಮುತ್ತ ಪಾರ್ಕಿಂಗ್ ಮಾಡದಂತೆ ಹಲವಾರು ಸಭೆಗಳಲ್ಲಿ ಹೇಳುತ್ತಿದ್ದರು ಈ ಬಗ್ಗೆ ಯಾವುದೇ ಕ್ರಮ ಆಗಿಲ್ಲ. ದೇವಸ್ಥಾನದ ಸಿಬ್ಬಂದಿಗಳು ಏನು ಮಾಡುತ್ತಿದ್ದಾರೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ನಗರದ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾದ ತೂಕದಲ್ಲಿ ಆಹಾರ ಪದಾರ್ಥಗಳನ್ನು ವಿತರಣೆ ಮಾಡುತ್ತಿಲ್ಲ ಎಂಬುವುದರ ಬಗ್ಗೆ ದೂರುಗಳು ಬಂದಿವೆ, ಅನ್ನಭಾಗ್ಯ ಅಕ್ಕಿಯನ್ನು ಖರೀದಿ ಮಾಡಿ ಅಕ್ರಮವಾಗಿ ಮಾರಾಟ ದಂಧೆ ನಡೆಸಲಾಗುತ್ತಿದೆ ಎಂಬ ಬಗ್ಗೆಯೂ ದೂರುಗಳು ಕೇಳಿಬಂದಿದ್ದು ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜರಾಲ್ಡ್ ರಾಜೇಶ್, ರಾಜ್ಯ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಾರುತಿ, ಟಿಎಪಿಸಿ ಎಮ್ ಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಚೆನ್ನಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
