ಮೈಸೂರು: ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್ ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು.
ನೀಟ್ ಪರೀಕ್ಷೆಯು ಮೇ 3 ರಂದು ಮೈಸೂರು ನಗರದಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7711 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಪರೀಕ್ಷೆ ಸುಸೂತ್ರವಾಗಿ ನಡೆಸಲು 17 ಪರೀಕ್ಷಾ ಕೇಂದ್ರಗಳಿಗೆ ಒಟ್ಟು ಇಬ್ಬರು ಕೋಆರ್ಡಿನೇಟರ್ , 20 ಪರೀಕ್ಷಾ ಅಧೀಕ್ಷಕರು ಹಾಗೂ ಏಳು ಅಧಿಕಾರಿಗಳ ತಂಡದ ಫ್ಲೈಯಿಂಗ್ ಸ್ಕ್ವಾಡ್ ನಿಯೋಜಿಸಲಾಗಿದೆ.
ಫ್ರಿಸ್ಕಿಂಗ್ ಕೆಲಸವನ್ನು ಭಾರತ ಸರ್ಕಾರದ ಮಾರ್ಗಸೂಚಿಯಂತೆ ನಡೆಸಬೇಕು ಎಂದು ಐಶ್ವರ್ಯ ಸೂಚಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಎಂ.ಜಿ.ಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್, ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜು, ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮಹಾರಾಣಿ ಮಹಿಳಾ ಕಲಾ ಕಾಲೇಜು, ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಒಂಟಿಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು, ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುವೆಂಪು ನಗರ ಸರ್ಕಾರಿ ಪದವಿಪೂರ್ವ ಕಾಲೇಜು, ಜಾಕಿ ಕ್ವಾಟ್ರಸ್ ಬಳಿ ಇರುವ ಸರ್ಕಾರಿ ಆದರ್ಶ ವಿದ್ಯಾಲಯ, ನಜರ್ಬಾದ್ ಹತ್ತಿರ ಇರುವ ಬೈಫರ್ಕೆಟೆಡ್ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಹಾಗೂ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ನೀಟ್ ಪರೀಕ್ಷೆಯ ಕೋಆರ್ಡಿನೇಟರ್ ಡಾ: ಎನ್.ಆರ್ ಶ್ರೀನಾಥ್ ಅವರು ಮಾತನಾಡಿ ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷಾರ್ಥಿಗಳ ಫ್ರಿಸ್ಕಿಂಗ್ ಹಾಗೂ ಬಯೋಮೆಟ್ರಿಕ್ ಪರಿಶೀಲನೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮಧ್ಯಾಹ್ನ 1.30 ರೊಳಗೆ ಮಾತ್ರ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿರುತ್ತದೆ, ನಂತರ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.
ಪರೀಕ್ಷಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನೀಟ್ ಪರೀಕ್ಷೆಯ ಕೋ ಆರ್ಡಿನೇಟರ್ ಮಿಥಿಲೇಶ್ ಕುಮಾರ್, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಶ್ರೀನಿವಾಸ, ಪದವಿ ಪೂರ್ವ ಶಿಕ್ಷಣ ಇಲಾಖೆಯ ರವಿಶಂಕರ್ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
