ಬೆಂಗಳೂರು: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ,ಇಡೀ ಜನತೆ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸಿಎಂ ಮಾತನಾಡಿದರು.

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದು ನುಡಿದರು.
ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು ಎಂದು ಸಿದ್ದು ಹೇಳಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗಬೇಂದು ಆಶಿಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಸಿಎಂ ಹೇಳಿದರು.
ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಮುಖ್ಯ ಮಂತ್ರಿಗಳು ಟೀಕಿಸಿದರು.