ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು, ಅವರ ಆಶೀರ್ವಾದದಿಂದಲೇ ಇಲ್ಲಿಯವರೆಗೂ ಸಾಗಿ ಬಂದಿದ್ದೇನೆ,ಅವರ ಆಶೀರ್ವಾದ ಇರುವತನಕ ರಾಜಕೀಯದಲ್ಲಿರುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಹೇಳಿದರು.
ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿ ರೂ ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ಸರ್ಕಾರ ಬೊಕ್ಕಸ ಖಾಲಿ ಮಾಡಿದೆ ಎಂದು ಬಿಜೆಪಿಯವರು ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಟಾಂಗ್ ನೀಡಿದರು.
ಕೇಂದ್ರ ಸರ್ಕಾರವೇ ಜಿಎಸ್.ಟಿ ಜಾರಿಗೆ ತಂದು ಎಂಟು ವರ್ಷ ಶೇ 24 ರಷ್ಟು ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದು ಹೆಳಿಕೊಂಡರು ಕರ್ನಾಟಕ ರಾಜ್ಯವೊಂದಕ್ಕೆ ಒಂದು ವರ್ಷಕ್ಕೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ. ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟವಾಗುತ್ತದೆ. ಇದಕ್ಕೆಲ್ಲ ಯಾರು ಹೊಣೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸುಜಾತ ಹಂಡೆ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಮಹಿಳೆಯೇ ಸ್ವತಃ ವಿವಸ್ತ್ರಗೊಂಡು ಮಹಿಳಾ ಪೊಲೀಸರನ್ನು ಕಚ್ಚಿದ್ದಾರೆ. ಆಕೆಯ ಮೇಲೆ ಎಫ್ಐಆರ್ ಆಗಿದೆ, ಪೊಲೀಸರು ವಿಚಾರಣೆಗೆ ಹೋಗಿದ್ದ ಸಂದರ್ಭದಲ್ಲಿ ಅವರನ್ನೇ ಕಚ್ಚಿದ್ದಾರೆ. ಹತ್ತು ಜನಕ್ಕೂ ಹೆಚ್ಚು ಮಹಿಳಾ ಪೊಲೀಸರಿದ್ದರು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಹಾಗೆ ಮಾಡಿದವರ ಮೇಲೆ ಕಾನೂನಿನ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
