ಮೈಸೂರು: ಕಳೆದ ದಸರಾ ಸಂದರ್ಭದಲ್ಲಿ ನಡೆದಿದ್ದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೈಸೂರು ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಕಾರ್ತಿಕ್ ಅಲಿಯಾಸ್ ಗರಡಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.
ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಆನಂದ್ ಪಿ. ಹೂಗಾಡೆ ಅವರು ತೀರ್ಪು ಪ್ರಕಟಿಸಿದ್ದು, ಆರೋಪಿ ತಪ್ಪಿತಸ್ಥ ಎಂದು ಪರಿಗಣಿಸಿ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ.
ಈ ಹಿಂದೆ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿ ಮರಣದಂಡನೆ ವಿಧಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಆರೋಪಿ ಕಾರ್ತಿಕ್ ನನ್ನು ಬಂಧಿಸಲು ತೆರಳಿದ್ದ ವೇಳೆ ಆರೋಪಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತನನ್ನು ನಿಯಂತ್ರಿಸಲು ಹಾಗೂ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದರು. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಕಳೆದ ದಸರಾ ಹಬ್ಬದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣ ರಾಜ್ಯದಲ್ಲೇ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರವಾಗಿ ಬಲವಾದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.
