ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಯೋತ್ಪಾದನೆ ವಿರುದ್ಧ ಹೋರಾಡಲು ಭಾರತಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುಟಿನ್ ಕರೆ ಮಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ,ಜತೆಗೆ ಅಮಾಯಕರ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಂಪೂರ್ಣ ಬೆಂಬಲ ನೀಡುವಯದಾಗಿ ಭರವಸೆ ನೀಡಿದ್ದಾರೆ.
ಪಹಲ್ಗಾಮ್ ದಾಳಿಯ ಅಪರಾಧಿಗಳು ಮತ್ತು ಅವರ ಬೆಂಬಲಿಗರನ್ನು ಶಿಕ್ಷಿಸಬೇಕು ಎಂದೂ ಕೂಡಾ ಅವರು ಹೇಳಿದ್ದಾರೆ.
ಭಾರತ-ರಷ್ಯಾ ನಡುವಿನ ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಇಬ್ಬರೂ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.