ಬೆಂಗಳೂರು: 500ಕ್ಕೂ ಹೆಚ್ಚು ಸಂಸ್ಥಾನಗಳಿಂದ 28 ರಾಜ್ಯಗಳಾಗಿ ಪರಿವರ್ತನೆಯಾಗಿ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿರುವ ಭಾರತವು ಸಂಸ್ಕೃತಿ, ಆಚಾರ, ವಿಚಾರಗಳಿಂದಾಗಿ ವಿಶ್ವದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ ತಿಳಿಸಿದರು.

ಬೆಂಗಳೂರಿನ ಕುಮಾರ ಪಾರ್ಕ್ ರಸ್ತೆಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಿ ಧ್ವಜಾರೋಹಣ ನೆರವೇರಿಸಿ ಅವರು ಮಾಡಿದರು.
ದೇಶದ ಪ್ರತಿಯೊಂದು ರಾಜ್ಯಗಳ ಪ್ರಾದೇಶಿಕ ಅಸ್ಮಿತೆ ಹಾಗೂ ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆ ವಿಶ್ವಕ್ಕೆ ಮಾದರಿಯಾಗಿದೆ. 140 ಕೋಟಿ ಜನಸಂಖ್ಯೆಯ ಭಾರತೀಯರಿಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಪ್ರತಿಯೊಬ್ಬರಿಗೂ ರಕ್ಷಣೆ ನೀಡುತ್ತಾ ಬರುತ್ತಿದೆ. ಇಂತಹ ಪ್ರಜಾಪ್ರಭುತ್ವ ರಾಷ್ಟ್ರವು 76ನೇ ಆಚರಣೆಯಲ್ಲಿ ತೊಡಗಿಕೊಂಡಿರುವುದು ಅತ್ಯಂತ ಹರ್ಷದ ಸಂಗತಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ನಂಜಪ್ಪ ಕಾಳೇಗೌಡ, ಬಸವರಾಜ ಮುದಿಗೌಡರ್, ಉಷಾ ಮೋಹನ್, ಜಗದೀಶ್ ಚಂದ್ರ, ಉಮೇಶ್ ಬಾಬು ಪಿಳ್ಳೇಗೌಡ, ಮಂಜುರಾವ್ ಪಾಪಣ್ಣ, ನವೀನ್ ಅಯ್ಯರ್, ಅನೀಸ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
