ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 12 ವೇಳೆ ನಿಧನ ಹೊಂದಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು.
ಆದರೆ ದಂಪತಿಗೆ ಮಕ್ಕಳಿರಲಿಲ್ಲ, ಮಕ್ಕಳಿಲ್ಲದ ದುಃಖವನ್ನು ಮರೆಯಲು ರಸ್ತೆ ಬದಿಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಸಾಕಿ ಬೆಳೆಸಿ ಮರಗಳಾಗಿಸಿದರು,ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾದರು.ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ತಿಮ್ಮಕ್ಕ ಅನಕ್ಷರಸ್ಥರು,ಆದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆ ಮಾಡಿದ್ದಾರೆ.
ಹಾಗಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ನಾಡೋಜ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ತಿಮ್ಮಕ್ಕ ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್,
ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ರಾಜಕೀಯ ನಾಯಕರು ಸಾಲುಮರದ ತಿಮ್ಮಕ್ಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
