ಬೆಂಗಳೂರು: ವಿದ್ಯಾರ್ಥಿಗಳ ಅತ್ಯಂತ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಹೆಚ್ಚಳ ಕಂಡುಬಂದಿದೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಗುರುವಾರ ಸಂಜೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದರು.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಇದು ಐತಿಹಾಸಿಕ ದಿನ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.
ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು, ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.70 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇಕಡಾ 83.65ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆಎಂದು ಸಚಿವರು ತಿಳಿಸಿದರು.
9 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 9 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ.ಅದೂ ಒಂದೇ ಕಾಲೇಜಿನ 9 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.
ಬೆಂಗಳೂರಿನ ರಾಜಾಜಿನಗರದ ಎಎಸ್ಸಿ ಕಾಲೇಜಿನ 9 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ ಪಡೆದಿವೆ. ಈ ಬಾರಿಯೂ ಈ ಎರಡು ಜಿಲ್ಲೆಗಳು ಅತ್ಯಧಿಕ ಉತ್ತೀರ್ಣ ಪ್ರಮಾಣ ದಾಖಲಿಸಿವೆ.
ಶೇಕಡಾ 96.39 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉತ್ತರ ಕನ್ನಡ ಜಿಲ್ಲೆ ಶೇಕಡಾ 96.35 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಪಡೆದಿದೆ.
ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಉತ್ತಮ ಸಾಧನೆ ತೋರಿದ್ದು, ಹಾಸನ ಹಾಗೂ ಯಾದಗಿರಿ ಜಿಲ್ಲೆಗಳು ಶೇಕಡಾ 71.21 ಫಲಿತಾಂಶದೊಂದಿಗೆ ರಾಜ್ಯಕ್ಕೆ ಕೊನೆಯ ಸ್ಥಾನದಲ್ಲಿವೆ ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.
ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಅರ್ಚನಾ ಮತ್ತು ಸಂಗೀತ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಮನ್ಯು ಎಸ್. ಶೆಟ್ಟಿ 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಮೊದಲ ಬಾರಿಗೆ ಡಿಜಿಲಾಕರ್ನಲ್ಲೂ ಫಲಿತಾಂಶ ಲಭ್ಯ:
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್ಸೈಟ್ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೂ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.
