ಮೈಸೂರು: ಮಹಿಳೆಯರ ಉಚಿತ ಪ್ರಯಾಣದ ಯೋಜನೆಯ ನೂರಾರು ಕೋಟಿ ರೂಪಾಯಿಯನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದರಿಂದ ಶಕ್ತಿ ಯೋಜನೆ ನಿಶ್ಯಕ್ತಿಯಾಗಿದೆ ಎಂದು ಬಿಜೆಪಿ ಮುಖಂಡರಾದ ಡಾ. ಹೇಮಾನಂದೀಶ್ ಟೀಕಿಸಿದ್ದಾರೆ.
ಜನರು ಗ್ಯಾರಂಟಿಗಳನ್ನು ಕೇಳದೇ ಇದ್ದರೂ ಕಾಂಗ್ರೆಸ್ ನಾಯಕರು ರಾಜಕೀಯ ಹಿತಾಸಕ್ತಿಗಾಗಿ ಅಗ್ಗದ ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಶಕ್ತಿ ಯೋಜನೆಯ ನೂರಾರು ಕೋಟಿ ರೂಪಯಿ ಟಿಕೆಟ್ ಮೊತ್ತವನ್ನು ಬಾಕಿ ಉಳಿಸಿ ಕೊಂಡಿರುವುದರಿಂದ ಸಾರಿಗೆ ನಿಗಮಗಳಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ನಷ್ಟ ಸರಿದೂಗಿಸಲು ಸರ್ಕಾರ ಪ್ರಯಾಣ ದರ ಹೆಚ್ಚಳ ಸೇರಿದಂತೆ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕುತ್ತಿದೆ.ಇದರಿಂದ ಸಾಮಾನ್ಯ ಪ್ರಯಾಣಿಕರು, ವಿದ್ಯಾರ್ಥಿಗಳು, ಕಾರ್ಮಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದ್ದಾರೆ.
ಗ್ಯಾರಂಟಿ ಯೋಜನೆಗಳ ವೆಚ್ಚ, ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಕೆಎಸ್ಆರ್ಟಿಸಿಯ ಬಾಕಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಹೇಮಾ ನಂದೀಶ್ ಒತ್ತಾಯಿಸಿದ್ದಾರೆ.
