ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು,ಅದು ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ರದ್ದು ಪಡಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ ಎಂದು ತಿಳಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ, ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ಕೊಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದು ಹೇಳಿದರು.
ಪರಿಸರ ಸ್ನೇಹಿ ಪಟಾಕಿ ಮಾಡುತ್ತೇವೆ ಅಂತ ಮುಚ್ಚಿಳಿಕೆ ಬರೆದು ಕೊಟ್ಟಿದ್ದಾರೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಲೈಸೆನ್ಸ್ ರದ್ದು ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಂಡ್ರೆ ತಿಳಿಸಿದರು.