ನವದೆಹಲಿ: ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಐಆರ್ ಪ್ರಕ್ರಿಯೆಯನ್ನು ದುರುಪಯೋಗ ಮಾಡಿ ಮತದಾರರ ಪಟ್ಟಿ ತಿರುಚುತ್ತಿದೆ ಎಂದು ಜೆಡಿಎಸ್, ಬಿಜೆಪಿ ನೇತೃತ್ವದ ಎನ್.ಡಿ.ಎ ನಿಯೋಗ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದೆ.
ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ಅವರ ನೇತೃತ್ವದ ನಿಯೋಗ ನವದೆಹಲಿಯಲ್ಲಿ ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಸರಕಾರ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಬಗ್ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿತು.
ರಾಜ್ಯದ ಆಡಳಿತ ಯಂತ್ರವನ್ನು, ಅದರಲ್ಲಿಯೂ ಮುಖ್ಯವಾಗಿ ಕೆಲ ಜಿಲ್ಲಾಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಸರ್ಕಾರ ಮತದಾರರ ಪಟ್ಟಿಯನ್ನು ತಿರುಚಿ ಅಕ್ರಮ ಮತಗಳು ಉಳಿದುಕೊಳ್ಳುವ ರೀತಿಯಲ್ಲಿ ಹುನ್ನಾರ ನಡೆಸುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ದೂರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವಿವರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಬಗ್ಗೆ ತಕ್ಷಣ ಗಮನಹರಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಭಾನುವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ನಿಯೋಗದಿಂದ ದೂರು ಸಲ್ಲಿಸಲಾಗಿತ್ತು. ಈಗ ರಾಷ್ಟ್ರಮಟ್ಟದ ಆಯೋಗದ ಮುಂದೆ ನಮ್ಮ ಆತಂಕವನ್ನು ತಿಳಿಸಿದ್ದೇವೆ. ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ನಮ್ಮ ಆತಂಕಕ್ಕೆ ಸ್ಪಂದಿಸಿ ಈಗಾಗಲೇ ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ವೀಕ್ಷಕರನ್ನು ಕಳಿಸಿದೆ,ಅಷ್ಟೇ ಅಲ್ಲ, ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಮೇಲುಸ್ತುವಾರಿ ವಹಿಸಲು ಹೊರ ರಾಜ್ಯದ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕೋರಿದ್ದೇವೆಂದು ಕುಮಾರಸ್ವಾಮಿ ನೀಡಿದರು.
ತನ್ನ ಅದೀನದಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸುತ್ತಿರುವ ರಾಜ್ಯ ಸರ್ಕಾರವು; ಕಲ್ಯಾಣ ಮಂಟಪ ಮಸೀದಿಗಳು ಸಮುದಾಯ ಭವನಗಳು ಹಾಗೂ ತನಗೆ ಬೇಕಾದ ಜಾಗಗಳಲ್ಲಿ ಜನರನ್ನು ಗುಂಪು ಗುಂಪಾಗಿ ಸೇರಿಸಿಕೊಂಡು ತನಗೆ ಬೇಕಾದ ಹಾಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿಕೊಳ್ಳುತ್ತಿದೆ. ಕಳೆದ ಏಳು ದಿನಗಳಿಂದ ಆಗಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ಆಗಿವೆ. ಇದೆಲ್ಲವನ್ನು ಸರಿಪಡಿಸುವ ಉದ್ದೇಶದಿಂದ ಈವರೆಗಿನ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಬೇಕು ಎಂದು ಮುಖ್ಯ ಚುನಾವಣ ಆಯುಕ್ತರನ್ನು ವಿನಂತಿಸಿದ್ದೇವೆ ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.
ಕೇಂದ್ರ ಸಚಿವರಾದ ವಿ.ಸೋಮಣ್ಣ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್ ನಾಯಕ ಸಿ.ಬಿ. ಸುರೇಶ್ ಬಾಬು, ಸಂಸದರಾದ ಎಂ.ಮಲ್ಲೇಶ್ ಬಾಬು, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಶಾಸಕ ಅರವಿಂದ್ ಬೆಲ್ಲದ ಮುಂತಾದವರು ನಿಯೋಗದಲ್ಲಿ ಹಾಜರಿದ್ದರು.
