(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)
ಚಾಮರಾಜನಗರ: ಇತ್ತೀಚಿಗೆ ಸಾಮಾಜಿಕ ಜಾಲಾತಾಣದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದರ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆ, ಕೊಳ್ಳೆಗಾಲ ಪೊಲೀಸರು ದೂರು ದಾಖಲಿಸಿಕೊಂಡು ಒಬ್ಬನನ್ನ ನ್ಯಾಯಾಂಗ ಬಂದನಕ್ಕೆ ನೀಡಿದ್ದಾರೆ.
ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಸಣಾಪುರ ಗ್ರಾಮದಲ್ಲಿನ ಘಟನೆಗೆ ಸಂಬಂಧಪಟ್ಟಂತೆ, ಯಳಂದೂರು ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಲ್ಲಿನ
ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖಾ ಕ್ರಮ ಕೈಗೊಳ್ಳಲಾಗಿದೆ.
ಆದರೆ ಈ ವಿಚಾರವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಬಳಸಿ ಹಾಗೂ ಪ್ರಚೋದನಕಾರಿಯಾಗಿ ಪೋಸ್ಟ್ಗಳನ್ನು ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿರುವ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನಲ್ಲಿ ಸತತವಾಗಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಮಾಡುತ್ತಿರುತ್ತಾರೆ.
ಮೇಲ್ಕಂಡ ಘಟನೆಗೆ ಸಂಬಂಧಪಟ್ಟಂತೆ ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯ ವ್ಯಕ್ತಿಯೊಬ್ಬರು ಫೇಸ್ ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದರ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಡುವ ಪೋಸ್ಟ್ಗಳ ಬಗ್ಗೆ ನಿಗಾವಣೆ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಆಶ್ಲೀಲ ಪದಬಳಕೆ, ಕೋಮು ಸೌಹಾರ್ದ, ಕಾನೂನು ಸುವ್ಯವಸ್ಥೆ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆವುಂಟುಮಾಡುವಂತಹ ಪದಬಳಕೆ ಹಾಗೂ ಪೋಸ್ಟ್ಗಳನ್ನು ಹಾಕಿದ್ದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಸುಮೋಟೊ ಕೇಸ್ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು.ಎಂ.ಅವರು ಸಾರ್ವಜನಿಕವಾಗಿ ಎಚ್ಚರಿಕೆ ನೀಡಿದ್ದಾರೆ.
