ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಸಾರ್ವಜನಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸುವುದು ಹಾಗೂ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಇಂತಹ ವಿಶೇಷ ಆಂದೋಲನಗಳು ಮಹತ್ವದ ಪಾತ್ರ ವಹಿಸುತ್ತವೆ,ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 2.10 ಲಕ್ಷಕ್ಕೂ ಅಧಿಕ ಆಸ್ತಿಗಳಿದ್ದು, ಈ ಪೈಕಿ ಇದುವರೆಗೆ ಸುಮಾರು 78,700ಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ವಿತರಿಸಲಾಗಿದೆ. ಉಳಿದಿರುವ ಅರ್ಹ ಆಸ್ತಿಗಳಿಗೂ ಇ-ಖಾತಾ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಯಾವುದೇ ಅರ್ಹ ಆಸ್ತಿ ಮಾಲೀಕರು ದಾಖಲೆಗಳ ಕೊರತೆಯಿಂದ ಇ-ಖಾತಾ ಸೌಲಭ್ಯದಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯವಾಗಿದೆ. ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳನ್ನು ಒದಗಿಸಲು ಸಾಧ್ಯವಾಗದವರು ಹಾಗೂ ಅಕ್ಟೋಬರ್ 28ರಂದು ನಡೆದ ಆಂದೋಲನದಲ್ಲಿ ಭಾಗವಹಿಸಲು ಸಾಧ್ಯವಾಗದ ನಾಗರಿಕರಿಗೆ ಮತ್ತೊಂದು ಅವಕಾಶ ಕಲ್ಪಿಸುವ ಉದ್ದೇಶದಿಂದ ನವೆಂಬರ್ 5, 6 ಮತ್ತು 7ರಂದು ವಿಶೇಷ ಇ-ಖಾತಾ ಆಂದೋಲನವನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಹ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಇ-ಖಾತಾ ವಿತರಿಸಲು ಅಧಿಕಾರಿಗಳು ಆದ್ಯತೆ ನೀಡಬೇಕು. ಆಸ್ತಿ ಮಾಲೀಕರಿಗೆ ಅನಗತ್ಯ ವಿಳಂಬವಾಗದಂತೆ ಕ್ರಮವಹಿಸುವುದರ ಜೊತೆಗೆ, ಇ-ಖಾತಾ ವಿತರಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಾಗರಿಕ ಸ್ನೇಹಿ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಡಾ.ಯತೀಂದ್ರ ಸೂಚಿಸಿದರು.
ಈ ಸಂದರ್ಭದಲ್ಲಿ ಹಲವಾರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಇ-ಖಾತಾ ಪ್ರತಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್, ಮೈಸೂರು ಮಹಾನಗರ ಪಾಲಿಕೆ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉಸ್ತುವಾರಿ ಸಮಿತಿಯ ಅಧ್ಯಕ್ಷೆ ಪುಷ್ಪವಲ್ಲಿ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಆರೀಫ್ ಹುಸೇನ್, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
