ಬೆಂಗಳೂರು, ನ. 2: ಟನಲ್ ರಸ್ತೆ ಯೋಜನೆಯನ್ನ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಹೇಳಿದರು.
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು ಎಂದು ಪ್ರಶ್ನಿಸಿದರು.
ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದು ತಿಳಿಸಿದರು.
ಟನಲ್ ಯೋಜನೆಯನ್ನು ಶ್ರೀಮಂತರನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ ಎಂದು ಹೇಳಲಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ ಟನಲ್ ಯೋಜನೆಯನ್ನು ಕಾರು, ಬಸ್ ,ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಉತ್ತರಿಸಿದರು.
ಬೆಂಗಳೂರು, ನವೆಂಬರ್. ೧: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಮಂತ್ರಿಗಳು, ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕೆಂದು ಕರೆ ನೀಡಿದರು.
ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರಬೇಕೆಂದು ಕೇಂದ್ರ ಸರ್ಕಾರವನ್ನು ಇದೇ ವೇಳೆ ಒತ್ತಾಯಿಸಿದರು.
ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ವುಸ್ತರಿಸುವ ಕಾರ್ಯವನ್ನೂ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದು ಸಿದ್ದು ತಿಳಿಸಿದರು.
ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ ರೂ ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ 483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
1956 ರಂದು ಏಕೀಕರಣಗೊಂಡ ನಮ್ಮ ಕರ್ನಾಟಕ ರಾಜ್ಯ ಉದಯವಾಗಿ ನವೆಂಬರ್ 1, 2025 ಕ್ಕೆ 69 ವರ್ಷ ಪೂರೈಸಿ 70 ನೇ ವರ್ಷಕ್ಕೆ ಮುನ್ನಡೆಯುತ್ತಿದೆ,ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಎಲ್ಲ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ಮೈಸೂರಿನ ವಿದ್ಯಾರ್ಥಿ ರಾಮಸ್ವಾಮಿ, ಬಳ್ಳಾರಿಯ ರಂಜಾನ್ ಸಾಬ್ ಮುಂತಾದವರಿಗೆ ತಲೆಬಾಗಿ ನಮಿಸುತ್ತೇನೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಏಕೀಕರಣ ಚಳವಳಿಯ ಬೀಜಗಳನ್ನು ಬಿತ್ತಿ, ಅದನ್ನು ಮುನ್ನಡೆಸಿದ ಆಲೂರು ವೆಂಕಟರಾಯರು, ಅಂದಾನಪ್ಪ ದೊಡ್ಡಮೇಟಿ, ಗುದ್ಲೆಪ್ಪ ಹಳ್ಳಿಕೇರಿ, ಸಿದ್ದಪ್ಪ ಕಂಬಳಿ, ಆರ್.ಎಚ್. ದೇಶಪಾಂಡೆ, ಕೌಜಲಗಿ ಶ್ರೀನಿವಾಸ ರಾವ್, ಕೆಂಗಲ್ ಹನುಮಂತಯ್ಯ ಮುಂತಾದ ಮಹನೀಯರನ್ನು ಹೃದಯ ತುಂಬಿ ಸ್ಮರಿಸುತ್ತೇನೆ. ಇವರೆಲ್ಲರ ಹೋರಾಟದ ಫಲವೆ ಇಂದಿನ ಕರ್ನಾಟಕ ಎಂದು ಬಣ್ಣಿಸಿದರು.
ಮನುಷ್ಯ ಜಾತಿ ತಾನೊಂದೇ ವಲಂ’ ಎಂದ ಆದಿಕವಿ ಪಂಪನಿಂದ ಹಿಡಿದು ಇಲ್ಲಿಯವರೆಗೂ ಕನ್ನಡದ ಸಾಹಿತ್ಯ ಸಂಪತ್ತು ಸಾಕಷ್ಟು ಸಮೃದ್ಧಗೊಂಡಿದೆ. ನಮ್ಮ ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರಕಿದೆ ಎಂದು ಹೇಳಿದರು.
ಸಾವಿರಾರು ವರ್ಷಗಳಷ್ಟು ಹಳೆಯ ಇತಿಹಾಸವುಳ್ಳ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ. ಶಿಕ್ಷಣದಲ್ಲಿ ಕನ್ನಡ ಭಾಷೆಯ ನಿರ್ಲಕ್ಷ ಹಲವು ಸಮಸ್ಯೆಗಳನ್ನು ಹುಟ್ಟಿ ಹಾಕಿದೆ. ಜಗತ್ತಿನ ಮುಂದುವರೆದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಇಂದು ಕನ್ನಡದಂಥ ಭಾಷೆಗೆ ಬಂದಿದೆ. ಮುಂದುವರೆದ ದೇಶಗಳ ಮಕ್ಕಳು ತಮ್ಮ ತಾಯಿ ನುಡಿಗಳಲ್ಲಿಯೆ ಯೋಚಿಸುತ್ತಾರೆ, ಕಲಿಯುತ್ತಾರೆ ಮತ್ತು ಕನಸು ಕಾಣುತ್ತಾರೆ. ಆದರೆ ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಿದೆ. ಇಂಗ್ಲೀಷು, ಹಿಂದಿಯಂಥ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ಭಾಷೆಯ ಕಾರಣಕ್ಕೆ ದುರ್ಬಲಗೊಳಿಸುತ್ತಿವೆ. ಹಾಗಾಗಿ ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರಬೇಕಾದ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದರು.
ಒಂದು ನಾಡನ್ನು ಕಟ್ಟುವುದು ಸರಳವಾದ ಸಂಗತಿಯಲ್ಲ. ನಾಡೊಂದರ ಸಮಗ್ರ ಅಭಿವೃದ್ಧಿಯೆಂದರೆ ರಸ್ತೆ, ಸೇತುವೆ, ವಿದ್ಯುತ್, ರೈಲು, ವಿಮಾನ, ಸುಸಜ್ಜಿತ ಕಟ್ಟಡಗಳಷ್ಟೆ ಅಲ್ಲ. ಆ ನಾಡಿನ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ, ತಮ್ಮ ಜೊತೆಯಲ್ಲಿನ ಮಕ್ಕಳ ಭಾಷೆ, ಬದುಕು, ಧರ್ಮ, ಜಾತಿ ಹಾಗೂ ಇನ್ನಿತ್ಯಾದಿ ಭಿನ್ನತೆಗಳನ್ನು ಸಹನೆಯಿಂದ ನೋಡುವುದನ್ನು ಕಲಿಸುವುದೂ ಮುಖ್ಯ. ಇದರ ಜೊತೆಗೆ ಜಗತ್ತಿನ ಮುಖ್ಯ ದೇಶಗಳಲ್ಲಿ ನಡೆಯುತ್ತಿರುವ ವಿವಿಧ ರೀತಿಯ ಅನ್ವೇಷಣೆಗಳಿಗೆ ಸರಿಸಾಟಿಯಾಗಿ ನಿಲ್ಲುವಂಥ ರೀತಿಯಲ್ಲಿ ಆಲೋಚನೆಗಳನ್ನು ಕಲಿಸುವ ವಾತಾವರಣವೂ ಬಹಳ ಮುಖ್ಯ ಎಂದು ತಿಳಿಸಿದರು.
ಈ ವರ್ಷ ಕನ್ನಡಕ್ಕೆ ಬೂಕರ್ ಪ್ರಶಸ್ತಿಯನ್ನು ಶ್ರೀಮತಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಯವರು ತಂದುಕೊಡುವ ಮೂಲಕ ನಮ್ಮ ಭಾಷೆಯ ಶಕ್ತಿಯನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ. ಅವರನ್ನೂ ಈ ಸಂದರ್ಭದಲ್ಲಿ ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಮುಖ್ಯ ಮಂತ್ರಿಗಳು ಹೃದಯತುಂಬಿ ಹೇಳಿದರು.
ಒಕ್ಕೂಟ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ಮಲತಾಯಿ ಧೋರಣೆಯನ್ನು ತೋರುತ್ತಿದೆ. 4.5 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನ ತೆರಿಗೆ ಸಂಪತ್ತನ್ನು ಕರ್ನಾಟಕವು ನೀಡುತ್ತಿದೆ. ಆದರೆ ನಮಗೆ ಬಿಡಿಗಾಸು ಕೊಟ್ಟು ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತಿದೆ. ಹಿಂದಿ ಭಾಷೆಯನ್ನು ಹೇರಿಕೆ ಮಾಡಲು ನಿರಂತರ ಹುನ್ನಾರ ನಡೆಯುತ್ತಿದೆ. ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನಗಳನ್ನು ನೀಡಲಾಗುತ್ತಿದೆ. ಕನ್ನಡವೂ ಸೇರಿದಂತೆ ಉಳಿದ ದೇಶಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ನಾಡಿನ ಇತಿಹಾಸ, ಪರಂಪರೆಗಳ ನೆನಪುಗಳನ್ನು ಹೊಸ ತಲೆಮಾರುಗಳಲ್ಲಿ ಮೂಡಿಸಿ ಅವರಲ್ಲಿ ಅಭಿಮಾನ ಮೂಡಿಸೋಣ. ನಮಗಿರುವ ಸವಾಲುಗಳನ್ನೆ ಅವಕಾಶವಾಗಿ ಮಾರ್ಪಡಿಸುವ ಶಕ್ತಿ ನಮ್ಮ ಯುವ ತಲೆಮಾರಿಗಿದೆ. ಯುವ ತಲೆಮಾರು ಎದ್ದು ನಿಂತು ಕನ್ನಡ ಮತ್ತು ಕರ್ನಾಟಕವನ್ನು ಜಗತ್ತಿನ ಮುಂದುವರೆದ ಸಮಾಜಗಳ ಮಟ್ಟಕ್ಕೆ ನಿಲ್ಲಿಸಬೇಕಾಗಿದೆ ಎಂದು ಕರೆ ನೀಡಿದರು.
ಇತ್ತೀಚೆಗೆ ತಾನೆ ಪ್ರೊ.ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ವರದಿಯನ್ನು ನೀಡಿದೆ. ರಾಜ್ಯದ್ದೆ ಆದ ಶಿಕ್ಷಣ ನೀತಿಯು ರಚನೆಯಾಗಿರುವುದು ಇದೇ ಮೊದಲು,ಈ ವರದಿಯನ್ನು ಗಂಭೀರವಾಗಿ ಪರಿಶೀಲಿಸಿ ಅದರ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.
ಬಹಳ ವರ್ಷಗಳ ನಂತರ ಫಾರಿನ್ ಡೈರೆಕ್ಟ್ ಇನ್ವೆಸ್ಟ್ ಮೆಂಟ್ ನಲ್ಲಿ 2024-25 ರಲ್ಲಿ ಕರ್ನಾಟಕವು ಮಹಾರಾಷ್ಟ್ರವನ್ನು ಹಿಂದೆ ಹಾಕಿ, ಮೊದಲ ಸ್ಥಾನಕ್ಕೆ ಏರಿದೆ ಎಂಬುದಾಗಿ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಅಂಕಿ ಅಂಶಗಳು ಹೇಳುತ್ತಿವೆ. 50,107 ಕೋಟಿ ರೂ.ಗಳಿಗೂ ಹೆಚ್ಚಿನ ವಿದೇಶಿ ನೇರ ಹೂಡಿಕೆಯು ರಾಜ್ಯದಲ್ಲಿ ಆಗಿದೆ. ಇಡೀ ದೇಶದ ಹೂಡಿಕೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಪಾಲು ಶೇ.51 ರಷ್ಟಿದೆ. ಅದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಂತಸದಿಂದ ಸಿದ್ದು ಹೇಳಿದರು.
ನಮ್ಮ ರಾಜ್ಯವು ತಲಾದಾಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶೇ.101 ರಷ್ಟು ಪ್ರಗತಿಯನ್ನು ಸಾಧಿಸಿದೆ. ಈ ಮೂಲಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಜನರಲ್ಲಿ ಕೊಳ್ಳುವ ಸಾಮರ್ಥ್ಯ ವನ್ನು ಹೆಚ್ಚಿಸಿ, ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವ ಮೂಲಕ ಅಭಿವೃದ್ಧಿ ಸಾಧ್ಯ ಎಂಬುದನ್ನು ನಾವು ಸಾಧಿಸಿ ತೋರಿಸಿದ್ದೇವೆ ಎಂದು ಸಿದ್ದು ಹೇಳಿದರು.
ನಮ್ಮ ಸರ್ಕಾರವು ಗಿಗ್ ಎಕಾನಮಿ, ಗ್ರೀನ್ ಎಕಾನಮಿ, ಗ್ಯಾರಂಟಿ ಎಕಾನಮಿ, ಗ್ಲೋಬ್ ಟ್ರೋಟಿಂಗ್ ಎಕಾನಮಿ, ಪ್ರವಾಸೋದ್ಯಮ ಆರ್ಥಿಕತೆ, ಗುಡ್ ಗವರ್ನೆನ್ಸ್, ಜಿಯೊಗ್ರಾಫಿಕಲ್ ಈಕ್ವಾಲಿಟಿ, ಪ್ರಾದೇಶಿಕ ಸಮಾನತೆ, ಗುಡ್ ಹೆಲ್ತ್ ಟು ಆಲ್ ಪೀಪಲ್, ಜೆಂಡರ್ ಈಕ್ವಾಲಿಟಿ, ಗುಡ್ ಪಬ್ಲಿಕ್ ಎಜುಕೇಶನ್, ಗುಡ್ ಕನೆಕ್ಟಿವಿಟಿ ಮುಂತಾದ 10-ಜಿ ಗಳನ್ನು ಮುಖ್ಯ ಗುರಿಯಾಗಿಸಿಕೊಂಡು, ಧ್ಯೇಯವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿಯೆ ಕರ್ನಾಟಕವು ಉದಯಿಸುತ್ತಿದೆ. ದ ರೈಸಿಂಗ್ ಕರ್ನಾಟಕದ ಕುರಿತು ವಿಶ್ವ ಸಂಸ್ಥೆಯ ಮುಖ್ಯಸ್ಥರಾದ ಫಿಲೆಮಾನ್ ಯಾಂಗ್ ಅವರೆ ಶ್ಲಾಘಿಸಿದ್ದಾರೆ. ಇವೆಲ್ಲವೂ ನಮಗೆ ಹೆಮ್ಮೆಯನ್ನೂ ತಂದಿವೆ. ಜವಾಬ್ಧಾರಿಯನ್ನೂ ಹೆಚ್ಚಿಸಿವೆ ಮುಖ್ಯ ಮಂತ್ರಿಗಳು ತಿಳಿಸಿದರು.
ಬೆಂಗಳೂರು: ಕಾನೂನು ತಿದ್ದುಪಡಿಯಿಂದ ಮೈಕ್ರೋ ಫೈನಾನ್ಸ್ ಹಾವಳಿ ನಿಲ್ಲುವುದಿಲ್ಲ ಎಂದು ಕಳೆದ ಮಾರ್ಚ್ ತಿಂಗಳಲ್ಲೇ ಸದನದಲ್ಲಿ ನಾನು ಹೇಳಿದ್ದ ಮಾತು ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರತಿಪಕ್ಷದ ನಾಯಕ ಅಶೋಕ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯವರು ರೈತನ ಮನೆಗೆ ಬೀಗ ಜಡಿದು ಜಪ್ತಿ ಮಾಡಿರುವ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಹಾವಳಿಯಿಂದ ರೈತರು, ಕೃಷಿ ಕಾರ್ಮಿಕರು, ಬಡವರನ್ನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
ಕಾನೂನು ತಿದ್ದುಪಡಿಯಿಂದ ಈ ಹಾವಳಿ ನಿಲ್ಲುವುದಿಲ್ಲ, ನಿಗಮ ಮಂಡಳಿಗಳಿಗೆ ಅನುದಾನ ನೀಡಿ ಅದರ ಮೂಲಕ ಬಡವರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗುವಂತಾದರೆ ಮಾತ್ರ ಈ ಹಾವಳಿ ನಿಲ್ಲುತ್ತದೆ ಎಂದು ಸದನದಲ್ಲಿ ನಾನು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದೆ,ಆದರೂ ಯಾವ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ, ಮನೆ-ಮಠ ಕಳೆದುಕೊಂಡು ಬೀದಿಗೆ ಬಂದಿರುವ ಎಲ್ಲ ಪ್ರಕರಣಗಳಿಗೂ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಅಶೋಕ್ ದೂರಿದ್ದಾರೆ.
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಶುಕ್ರವಾರ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿದ ವೇಳೆ ಸಿಎಂ ಸ್ಪಂದಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದು ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ , ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.
ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೂ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ಶಿಫಾರಸಿನಂತೆ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕಲ್ಪಿಸಲು ಆದ್ಯತೆ ನೀಡುವಂತೆ , ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ರಚನೆ ಹಾಗೂ ಅಲೆಮಾರಿ ಸಮುದಾಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವ ಕುರಿತಂತೆ ಮುಖ್ಯಮಂತ್ರಿ ಅವರಲ್ಲಿ ನಿಯೋಗ ಮನವಿ ಮಾಡಿತು.
ಸಭೆಯಲ್ಲಿ ಸಚಿವರಾದ ಎಚ್ ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಮಾಜಿ ಸಚಿವರಾದ ಎಚ್ ಆಂಜನೇಯ, ವಿವಿಧೆಡೆಗಳಿಂದ ಆಗಮಿಸಿದ್ದ ಅಲೆಮಾರಿ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು: ತಾಯಿಯೇ ದೇವರು ಎಂದು ನಾವೆಲ್ಲ ಪೂಜಿಸುತ್ತೇವೆ,ಆದರೆ ಬೆಂಗಳೂರಿನಲ್ಲೊಬ್ಬಳು ಪಾಪಿ ಪುತ್ರಿ ತನ್ನನ್ನು ಹೆತ್ತ ಅಮ್ಮನನ್ನು ಕೊಂದಿದ್ದಾಳೆ!
ಅಪ್ರಾಪ್ತ ಮಗಳು ಸ್ನೇಹಿತರ ಜತೆ ಸೇರಿ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.
ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ತಾಯಿ.
ಸ್ನೇಹಿತರ ಜೊತೆ ಸೇರಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ನೇಣು ಹಾಕಿದ್ದಾಳೆ.
ಈ ಹೇಯ ಕೃತ್ಯದಲ್ಲಿ ಐವರು ಅಪ್ರಾಪ್ತರು ಭಾಗಿಯಾಗಿದ್ದಾರೆಂದು ಪೋಲೀಸರು ತಿಳಿಸಿದ್ದಾರೆ.
ಅ.25 ರಂದು ಈ ಘಟನೆ ನಡೆದಿದ್ದು ಕೊಲೆ ತಡವಾಗಿ ಗೊತ್ತಾಗಿದೆ.ಇದಕ್ಕೂ ಮೊದಲು ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಸಿಕೊಂಡಿದ್ದರು.
ನಂತರ ಕೊಲೆಯಾದ ನೇತ್ರಾವತಿ ಅವರ ಅಕ್ಕ ಅನಿತಾಗೆ ಮಗಳ ಮೇಲೆ ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.
ನೇತ್ರ ಸಾವಿನ ನಂತರ ಅವಳ ಮಗಳು ಎಲ್ಲೂ ಕಾಣುತ್ತಿಲ್ಲ ಎಂದು ದೂರು ನೀಡಿದ್ದರು. ಎರಡು ದಿನಗಳ ಬಳಿಕ ಮಗಳು ವಾಪಸ್ ಮನೆಗೆ ಬಂದಿದ್ದಳು.
ಈ ಬಗ್ಗೆ ಅನಮಾನ ವ್ಯಕ್ತವಾದ ಹಿನ್ನಲೆ ನೇತ್ರಾವತಿಯ ಅಕ್ಕ ದೂರು ನೀಡಿದ್ದರು. ತನಿಖೆ ವೇಳೆ ಮಗಳಿಂದಲೇ ತಾಯಿ ಕೊಲೆಯಾಗಿದೆ ಎಂಬುದು ಬಯಲಾಗಿದೆ.
ಪುತ್ರಿ ಆಗಾಗ ಪ್ರಿಯತಮ ಮತ್ತು ಸ್ನೇಹಿತರನ್ನು ಮನೆಗೆ ಕರೆತರುತ್ತಿದ್ದಳು.ಅದೇ ರೀತಿ ಅಕ್ಟೋಬರ್ 25 ರಂದೂ ಮನೆಗೆ ಸ್ನೇಹಿತರು ಬಂದಿದ್ದರು.
ಆಗ ನೇತ್ರಾವತಿ ಇದೆಲ್ಲ ಬೇಡ ಚೆನ್ನಾಗಿರುವುದಿಲ್ಲ ಎಂದು ಬೈದು ಬುದ್ದಿ ಹೇಳಿದ್ದಾರೆ. ಇದಕ್ಕೆ ಮಗಳು ಒಪ್ಪಿಲ್ಲ,ಆಗ ಪೊಲೀಸರಿಗೆ ಕರೆ ಮಾಡುವುದಾಗಿ ತಾಯಿ ಹೇಳಿದ್ದಾರೆ, ಆಗ ಪುತ್ರಿ ಸ್ನೇಹಿತರೊಂದಿಗೆ ಸೇರಿ ತಾಯಿಯ ಹತ್ಯೆ ಮಾಡಿದ್ದಾಳೆ.
ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಆರ್ಡರ್ ಮಾಡಿದ ವಸ್ತು ತಲುಪಿಸಲು ಬಂದ ಡೆಲಿವರಿ ಬಾಯ್ ಬ್ರೆಜಿಲ್ ಮೂಲದ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಆರ್‌ಟಿ ನಗರದಲ್ಲಿ ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ದಿನಸಿ ವಸ್ತುಗಳನ್ನು ತಲುಪಿಸಲು ಬಂದ ಬ್ಲಿಂಕಿಟ್ ಡೆಲಿವರಿ ಏಜೆಂಟ್, 21 ವರ್ಷದ ಬ್ರೆಜಿಲ್ ಮೂಲದ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಸಂತ್ರಸ್ತೆಯ ಉದ್ಯೋಗದಾತರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಕುಮಾರ್ ರಾವ್ ಪವಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೆಯೂ ಮುಂಬಯಯಲ್ಲಿ ಬ್ಲಿಂಕಿಟ್ ಡೆಲಿವರಿ ಬಾಯ್ ಹಣ ಪಡೆಯುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿತ್ತು.
ಬ್ರೆಜಿಲ್ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ ಅರೆಕಾಲಿಕ ಬ್ಲಿಂಕಿಟ್ ಡೆಲಿವರಿ ಏಜೆಂಟ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕುಮಾರ್ ರಾವ್ ಪವಾರ್ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಬ್ಲಿಂಕಿಟ್‌ನಲ್ಲಿ ಅರೆಕಾಲಿಕ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಾಬಾಸಾಹೇಬ್ ನೇಮಗೌಡ ತಿಳಿಸಿದ್ದಾರೆ.
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ನಿಮ್ಮ ಗುರಿಯೂ ಆಗಲಿ, ಇದರಿಂದ ಇಡೀ ರಾಜ್ಯದ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಸಿಎಂ ಮಾತನಾಡಿದರು.
ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಠಿಣ ನಿಲುವು ತಳೆಯಬೇಕು ಎಂದು ಸಲಹೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಮುಖ್ಯ ಮಂತ್ರಿಗಳು ಕರೆ ನೀಡಿದರು.
ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರುತ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳಿ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪರೋಕ್ಷವಾಗಿ ಸಿಎಂ ಚಾಟಿ ಬೀಸಿದರು.
ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ,ಡ್ರಗ್ ಮುಕ್ತ ಕರ್ನಾಟಕ ಆಗಲಿ, ಮಾಡಿ ತೋರಿಸಿ ಎಂದು ತಿಳಿಸಿದರು.
ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದರು.
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.
ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ ಎಂಬಿಬಿಎಸ್ ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಸಿಎಂ ಮಾತನಾಡಿದರು.
ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯ ಎಂದು ಹೇಳಿದರು.
ಸಮಾಜದಲ್ಲಿ ಜಾತಿವ್ಯವಸ್ಥೆಯಿಂದ ಅಸಮಾನತೆಯಿದೆ. ಸಮಾನತೆಯನ್ನು ಸಾಧಿಸಿ ಸಮಸಮಾಜವನ್ನು ನಿರ್ಮಿಸಬೇಕಿದೆ. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಬೇಕೆಂದು ವೈದ್ಯ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಸಲಹೆ ನೀಡಿದರು.
ಬೆಂಗಳೂರು: ಡಿಕೆಶಿ ದುರ್ವತ್ರನೆಯಿಂದ ಬೆಂಗಳೂರು ನಗರ ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಬಗ್ಗೆ ಡಿ.ಕೆ. ಶಿವಕುಮಾರ್ ವಾಗ್ದಾಳಿಯ ಬಗ್ಗೆ ಆಮ್ ಆದ್ಮ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿದ್ದು, ಬೆಂಗಳೂರು ಸಿಲಿಕಾನ್ ನಗರ ವೆಂದು ಖ್ಯಾತಿಗೊಳ್ಳಲು ಇಲ್ಲಿನ ಐಟಿ ಉದ್ಯಮಿಗಳ ಕೊಡುಗೆ ಸಾಕಷ್ಟು ಮಟ್ಟದಲ್ಲಿದೆ ಎಂದು ಹೇಳಿದರು.
ದೇಶಕ್ಕೆ ಎರಡನೇ ಅತಿ ದೊಡ್ಡ ತೆರಿಗೆಯನ್ನು ನೀಡುವ ಹಾಗೂ ದೇಶದ ಆರ್ಥಿಕ ಇಂಜಿನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಐಟಿ ಉದ್ಯಮಗಳು, ಇಲ್ಲಿನ ಉದ್ಯೋಗಿಗಳು ಹಾಗೂ ಅವರಿಗೆ ಪೂರಕವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಅನೇಕ ಕಂಪನಿಗಳು ಪ್ರಮುಖ ಕಾರಣವಾಗಿವೆ.
ಈ ಕನಿಷ್ಠ ಜ್ಞಾನ ಇಲ್ಲದ ಬೆಂಗಳೂರು ನಗರಾಭಿವೃದ್ಧಿಯ ಹೊಣೆಯನ್ನು ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ದುರ್ವತ್ರನಕಾರಿ ಹೇಳಿಕೆಗಳಿಂದಾಗಿ ಏಷ್ಯಾದ ಅತಿ ದೊಡ್ಡ ಹೂಡಿಕೆಯಾದ ಗೂಗಲ್ ಸಂಸ್ಥೆಯ ಕೃತಕ ಬುದ್ಧಿಮತ್ತೆಯ ಡೇಟಾ ಮೈನಿಂಗ್ ಕೇಂದ್ರವು ವಿಶಾಖಪಟ್ಟಣದ ಪಾಲಾಗಿದೆ. ಈ ರೀತಿಯ ನಡೆಯಿಂದಾಗಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಕುಂಠಿತಗೊಳ್ಳುವುದು ನಿಸ್ಸಂದೇಹ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನ ಮೂಲಭೂತ ಸೌಕರ್ಯದ ನೆಪದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಕೊಳ್ಳೆಹೊಡೆಯುವ ಮಾರ್ಗಗಳನ್ನು ಹುಡುಕಿಕೊಂಡಿದ್ದಾರೆ. ಇತ್ತೀಚೆಗೆ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪ ಮಾಡಿಕೊಂಡೆ ಬಂದ ಕಾಂಗ್ರೆಸ್ ಪಕ್ಷವು ಸಹ ಯಾವುದೇ ತನಿಖೆಯನ್ನು ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡುವುದನ್ನು ಬಿಟ್ಟು ತಾವೇ 60% ಕಮಿಷನ್ ದಂಧೆಗೆ ಇಳಿದಿರುವುದೇ ಇಷ್ಟೆಲ್ಲ ಅನಾಹುತಕ್ಕೆ ಕಾರಣ ಎಂದು ಆರೋಪಿಸಿದರು.
ಇಂತಹ ಸಂದರ್ಭದಲ್ಲಿ ಡಿಕೆಶಿ ಯ ದುರಹಂಕಾರಿ ಹೇಳಿಕೆಗಳು ಇಲ್ಲಿನ ಐಟಿ ಉದ್ಯಮಿಗಳು ಬೆಂಗಳೂರನ್ನು ಬಿಡುವಂತೆ ಪ್ರಚೋದಿಸುತ್ತದೆ. ಉದ್ಯಮಿಗಳಿಗೆ ಪೂರಕವಾದಂತಹ ಉತ್ತಮ ರಸ್ತೆ, ನೀರು, ಒಳಚರಂಡಿ, ಸಂಚಾರ ವ್ಯವಸ್ಥೆಯಂತಹ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವುದನ್ನು ಬಿಟ್ಟು ಪ್ರತಿದಿನವೂ ಈ ರೀತಿಯ ಅಹಂಕಾರದ ಮಾತುಗಳನ್ನು ಬೆಂಗಳೂರಿಗರು ಸಹಿಸಲು ಸಾಧ್ಯವಿಲ್ಲ, ಮುಖ್ಯಮಂತ್ರಿಗಳು ಡಿಕೆಶಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸೀತಾರಾಮ್ ಗುಂಡಪ್ಪ ಅಗ್ರಹಿಸಿದರು.
ಮೈಸೂರು: ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷರು ಹಾಗೂ ಭಗೀರಥ ಚಲನಚಿತ್ರದ ನಾಯಕ ನಟ ಎಸ್ ಜಯಪ್ರಕಾಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇದೇ ಅ.28 ರಂದು ಬೆಳಗ್ಗೆ 10.30 ಕ್ಕೆ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅರ್ಚನೆ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಜೆ.ಪಿ.ಅಭಿಮಾನಿ ಬಳಗದ ತೇಜೇಶ್ ಲೋಕೇಶ್ ಗೌಡ, ಸಿಂದುವಳ್ಳಿ ಶಿವಕುಮಾರ್, ಕೃಷ್ಣಪ್ಪ, ಅಶೋಕ್, ಕಿಶೋರ್, ರಘು ಅರಸ್ ಮಾಹಿತಿ ನೀಡಿದರು.
ದೇವಾಲಯದಲ್ಲಿ ಪೂಜೆ ಸಲ್ಲಿಸಿ ಎಸ್ ಜಯಪ್ರಕಾಶ್ ಅವರ ಜನುಮ ದಿನ ಆಚರಿಸಿ,ನಂತರ ಡಾ ರಾಜಕುಮಾರ್ ಪಾರ್ಕ್ ಗೆ ತೆರಳಿ ಮಾಲಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಜಯಪ್ರಕಾಶ್ ಅವರಿಗೆ ಶುಭ ಹಾರೈಸಲು ಆಗಮಿಸುವ ಸ್ನೇಹಿತರು, ಅಭಿಮಾನಿಗಳಿಗೆ ಸಿಹಿ, ಫಲ, ಫಲಹಾರ ವಿತರಿಸಲಾಗುವುದು. ಜೊತೆಗೆ ಮೈಸೂರಿನ ಸುಮಾರು 8 ಅನಾಥಾಶ್ರಮ, ವೃದ್ಧಾಶ್ರಮ ಗಳಿಗೆ ಹಣ್ಣು ಹಂಪಲು ಮತ್ತು ಊಟ ವಿತರಿಸಲಾಗುವುದು ಎಂದು ತೇಜೇಶ್ ಲೋಕೇಶ್ ಗೌಡ ತಿಳಿಸಿದರು.
ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಾಲಯ ಮತ್ತು ಚಾಮರಾಜಪೇಟೆ ಶ್ರೀ ಮಹದೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಎಸ್.ಅಶೋಕ್ ಹೇಳಿದರು.