ಡ್ರಗ್ ಜಾಲದ ಬೇರುಗಳನ್ನೆ ಕತ್ತರಿಸುತ್ತೇವೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು
ತೀರ್ಮಾನಿಸಲಾಗಿದೆ ಎಂದು
ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಡಕ್ಕಾಗಿ ಹೇಳಿದರು.

ಡ್ರಗ್ಸ್ ಜಾಲ ತಡೆಯುವ ಬಗ್ಗೆ ಸಚಿವರು,ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ,ಡ್ರಗ್ಸ್ ಹಾವಳಿ ತಡೆಗೆ
ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು ಎಂದು ‌ತಿಳಿಸಿದರು.

ಪದೇ,ಪದೇ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಿದ್ದೇನೆ,ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದು ಹೇಳಿದರು.

ಯಾವುದೇ ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ದಂಧೆ ಕಂಡುಬಂದಲ್ಲಿ ಠಾಣಾಧಿಕಾರಿ, ಡಿವೈಎಸ್ ಪಿ, ಎಸಿಪಿ ಮತ್ತು ಎಸ್ ಪಿ ಗಳನ್ನು ಹೊಣೆ ಮಾಡಿ ಅವರ ವಿರುದ್ಧವೇ ಕ್ರಮ ತೆಗೆದುಕೊಳ್ಳುವುದಾಗಿ ಕಠಿಣ ಎಚ್ಚರಿಕೆ ನೀಡಿದರು.

ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ ಈಗ ಇರುವ ಕಾನೂನನ್ನು ಮತ್ತಷ್ಟು ಗಟ್ಟಿ ಮಾಡ್ತೇವೆ ಡ್ರಗ್ ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆವರೆಗೆ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು ಎಂದು
ಸಿಎಂ ತಿಳಿಸಿದರು.

ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು ಮತ್ತು ಸಮರ್ಪಕಗೊಳಿಸಲು ಕ್ರಮ ತೆಗೆದುಕೊಂಡು
ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ ಭರವಸೆ ನೀಡಿದರು.

ವಿದ್ಯಾರ್ಥಿಗಳು, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಮತ್ತ
ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕಲು ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ,ಈಗಾಗಲೇ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು ಪೂರ್ವ ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎಂಬ ಮಾಹಿತಿ ಸಿಕ್ಕಿದೆ,ಅದನ್ನ ಪೂರ್ಣ ನಿರ್ನಾಮ ಮಾಡಲು ನಿರ್ಧರಿಸಿದ್ದೇವೆ,ಒಡಿಶ್ಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ತರಲಾಗುತ್ತಿದೆ ಇದು ಅತ್ಯಂತ‌ ಗಂಭೀರ‌ ವಿಷಯವಾಗಿದ್ದು ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದು ಮುಖ್ಯ ಮಂತ್ರಿಗಳು ಸ್ಪಷ್ಟಪಡಿಸಿದರು.

ಡ್ರಗ್ ಜಾಲದ ಬೇರುಗಳನ್ನೆ ಕತ್ತರಿಸುತ್ತೇವೆ: ಸಿಎಂ Read More

100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ
ಒಟ್ಟು 840 ನೂತನ‌ ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು ಬಿಎಂಟಿಸಿ ಗೆ ಸೇರ್ಪಡೆಗೊಳಿಸಿದ್ದೇವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗಿದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಹೇಳಿದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಭರವಸೆ ನೀಡಿದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ,ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದು ಸಿದ್ದು ಹೇಳಿದರು.

ಗೃಹಲಕ್ಷ್ಮಿ,ಬಡವರಿಗೆ ಅಕ್ಕಿ ಕೊಡುವ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ಬಂದಿದೆ ಎಂದು ಮುಖ್ಯ ಮಂತ್ರಿ ತಿಳಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆ ಕೆ ಆರ್ ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ ಮಾಡಿದ ಸಿಎಂ Read More

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಅಶೋಕ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳು ಶಾಂತಿ ಕದಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬುಧವಾರ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಖಂಡಿಸಿರುವ ಅಶೋಕ್, ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಗೆ ಇದು ಮತ್ತೂಂದು ನಿದರ್ಶನವಾಗಿದೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತದ್ದೇ ಘಟನೆ ನಡೆದಿತ್ತು,ಆದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದರಿಂದಲೇ ಘಟನೆ ಮರುಕಳಿಸಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಕೆಲ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ, ಚಪ್ಪಲಿ ಎಸೆದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗಿದ್ದಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಕಾನೂನಿನ ಭಯವೇ ಇಲ್ಲದಂತಾಗಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೂ ಈ ಮತಾಂಧ ಪುಂಡರು ದಬ್ಬಾಳಿಕೆ ನಡೆಸಿರುವುದು ನೋಡಿದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ ದೊರಕುತ್ತಿದೆ ಎಂಬುದನ್ನು ಊಹಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಮರುಕಳಿಸುತ್ತಿರುವುದಕ್ಕೆ ನೇರ ಕಾರಣ ಎಂದು ಕಟುವಾಗಿ ಹೇಳಿದ್ದಾರೆ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

ನಾಗಮಂಗಲ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಅಶೋಕ್ ಆಕ್ರೋಶ Read More

ಪ್ರಕೃತಿಯಿಂದ ಲಾಭ ಪಡೆಯುವ ಎಲ್ಲರಲ್ಲೂ ಪ್ರಕೃತಿ ರಕ್ಷಣೆಯ ಹೊಣೆ ಇರಬೇಕು-ಸಿಎಂ

ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುವ ಎಲ್ಲರಲ್ಲೂ ಪ್ರಕೃತಿ ರಕ್ಷಣೆಯ ಹೊಣೆ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಸಿಎಂ ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ, ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು ಎಂದು ಹೇಳಿದರು.

ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದು ಸಿಎಂ ತಿಳಿಸಿದರು.

ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕು,ಅದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಿ ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ,ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು,ಅವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ಥಿಯಾಗಲಿ ಎಂದು ಆಶಿಸಿದರು‌

ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮ‌ರ ಕುಟುಂಬದವರು ಉಪಸ್ಥಿತರಿದ್ದರು.

ಪ್ರಕೃತಿಯಿಂದ ಲಾಭ ಪಡೆಯುವ ಎಲ್ಲರಲ್ಲೂ ಪ್ರಕೃತಿ ರಕ್ಷಣೆಯ ಹೊಣೆ ಇರಬೇಕು-ಸಿಎಂ Read More

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ:ಅಶೋಕ ಒತ್ತಾಯ

ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ,
ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಒತ್ತಾಯಿಸಿದರು.

ಮಾಧ್ಯಮ ದವರೊಂದಿಗೆ ಮಾತನಾಡಿದ ಅಶೋಕ್, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು, ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ ಎಂದು ಅಶೋಕ್ ಎಚ್ಚರಿಸಿದರು.

ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್‌ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್‌ ನಾಯಕರು ನೀಡಿದ್ದಾರೆ, ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ, ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ.ಹಾಗಾಗಿಯೇ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ, ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು, ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್‌ ಮಾಡಲಾಗಿತ್ತು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್‌ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು,ಅಭಿವೃದ್ಧಿ ಚಟುವಟಿಕೆ ನಡೆಯುತ್ತಿಲ್ಲ ಎಂದು ಇದೇ ವೇಳೆ ಅಶೋಕ್ ಟೀಕಾಪ್ರಹಾರ ನಡೆಸಿದರು.

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ:ಅಶೋಕ ಒತ್ತಾಯ Read More

ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಅಲ್ಲ-ಪರಂ

ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ,ಸಹಜವಾಗಿಯೇ ಮಾಹಿತಿ ಹೊರ ಬರುತ್ತದೆ ಎಂದು ಗೃಹ ಸಚಿವ ಡಾಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ ಗೂ ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ, ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ ಎಂದು ಹೇಳಿದರು.

ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.

ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ, ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ, ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿದ ಪರಂ, ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ ಎಂದರು.

ಸಚಿವ ಎಂ.ಬಿ.ಪಾಟೀಲ್ ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ ಎಂದು ಪರಮೇಶ್ವರ್ ಮಾಧ್ಯಮದವರನ್ನೇ ಪ್ರಶ್ನಿಸಿದರು.

ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಅಲ್ಲ-ಪರಂ Read More

ನಂಬಿಕೆ ನಕ್ಷೆ ಯೋಜನೆ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯ ಎಂಬುದು ಬೆಂಗಳೂರಿಗರ ನಂಬಿಕೆಯಾಗಿದೆ ಎಂದು ಆರ್.ಅಶೋಕ್ ಛೇಡಿಸಿದ್ದಾರೆ.

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆ ಇಲ್ಲದಂತಾಗಿದೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ,ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ,ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ,ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ,ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ,ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.

ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ನಂಬಿಕೆ ನಕ್ಷೆ ಯೋಜನೆ ಬಗ್ಗೆ ಅಶೋಕ್ ವ್ಯಂಗ್ಯ Read More