ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕೆ ಆರೋಪ

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ರಾಜಕೀಯದ ಸೇಡಿನ ಭಾಗ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು ಸಚಿವರು; ಆ ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ಈ ವಿಷಯವನ್ನು ಜೀವಂತವಾಗಿಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದರು.

1984ರಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದು. ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದೇನೆ. ಅಂದಿನಿಂದಲೂ ಈ ಭೂಮಿಯ ಮೇಲೆ ಕೆಲವರ ಕಣ್ಣು ಬಿದ್ದಿದೆ. ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೇ ಮೂಲಕ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಹೆಚ್ ಡಿ ಕೆ ಆರೋಪಿಸಿದರು.

2012ರಿಂದಲೂ ನನ್ನ ವಿರುದ್ದ ತನಿಖೆ ಮಾಡುತ್ತಿದ್ದಾರೆ, ಏನು ಸಿಗಲಿಲ್ಲ, ನಾನು ಸಿದ್ದರಾಮಯ್ಯನವರ ರೀತಿ ಸರಕಾರಿ ಜಮೀನು ಲೂಟಿ ಮಾಡಿಲ್ಲ. ಈಗ ಆಗಿರುವ ಎಲ್ಲಾ ತನಿಖೆಗಳು ಸಾಕಾಗುವುದಿಲ್ಲ ಎಂದು ಈಗ IAS ಅಧಿಕಾರಿಗಳ ನೇತೃತ್ವದಲ್ಲಿ SIT ತನಿಖೆ ಮಾಡಿಸುತ್ತಿದ್ದಾರೆ. ಯಾವುದೇ ತನಿಖೆ ಮಾಡಲಿ, ನಾನು ಮುಕ್ತವಾಗಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

1986ರಲ್ಲಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ರಾಮಚಂದ್ರ ಅವರುಗಳು ಇದೇ ಜಮೀನು ವಿಷಯದಲ್ಲಿ ಆಗಿನ ಪ್ರಧಾನಮಂತ್ರಿ, ಗೃಹ ಮಂತ್ರಿಯವರಿಗೆ ಪತ್ರ ಬರೆದಿದ್ದರು. ತಮ್ಮ ದೂರಿನಲ್ಲಿ ಅವರು ಕುಮಾರಸ್ವಾಮಿ ಅವರು ಜಮೀನು ಖರೀದಿಸಿದ್ದಾರೆ ಎಂದು ಹೇಳಿದ್ದರೇ ಹೊರತು ಕಬಳಿಸಿದ್ದಾರೆ ಎಂದು ಆರೋಪ ಮಾಡಿರಲಿಲ್ಲ. ನಾನು ಖರೀದಿ ಮಾಡಿರುವ ಆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದೇನೆಯೇ ಹೊರತು ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸಿಲ್ಲ,ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ತಿಳಿಸಿದರು.

ರಾಜ್ಯದ ಸಂಪತ್ತನ್ನು ರಕ್ಷಿಸುವವನ ರೀತಿ ವರ್ತಿಸುವ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಎನ್ನುವ ವ್ಯಕ್ತಿ ನನ್ನ ಜಮೀನು ವಿಷಯದ ಬಗ್ಗೆ ಆರೋಪ ಮಾಡಿದ್ದಾರೆ. ಆದರೆ, ರಾಜ್ಯ ಹೈಕೋರ್ಟ್ ನಿಂದ ನನಗೆ ಯಾವುದೇ ನೋಟೀಲ್ ಬಂದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ದೇವೇಗೌಡರನ್ನು ಮೋದಿ ಅವರ ಚಿಯರ್ ಲೀಡರ್ ಎಂದು ಆಗೌರವದ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಮಾತನಾಡುವ ಮುನ್ನ ತಮ್ಮ ಯೋಗ್ಯತೆ ಅರಿತುಕೊಂಡರೆ ಉತ್ತಮ ಎಂದು ತಿಳಿಸಿದರು.

ರಾಜ್ಯದ ನೀರಾವರಿಗೆ ದೇವೇಗೌಡರು ಏನು ಮಾಡಿದ್ದಾರೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂಬುದೂ ಜನರಿಗೆ ಗೊತ್ತಿದೆ. ದೇವೇಗೌಡರು ನೀರಾವರಿ ಬಗ್ಗೆ, ರಾಜ್ಯದ ಜನತೆಯ ರಕ್ಷಣೆ ಮಾಡುವುದಕ್ಕೆ ಇವರಿಂದ ಹೇಳಿಸಿಕೊಳ್ಳಬೇಕಿಲ್ಲ. ಸಿದ್ದರಾಮಯ್ಯ ಅವರೇ.. ಈ ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ನಿಮ್ಮ ಕೊಡುಗೆ ಏನು? ನೀರಾವರಿಗೆ ನಿಮ್ಮ ಕೊಡುಗೆ ಏನು? ಎಂದು ಕುಮಾರಸ್ವಾಮಿ ಕಾರವಾಗಿ ಪ್ರಶ್ನಿಸಿದರು.

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕೆ ಆರೋಪ Read More

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,200 ಕೋಟಿ ರೂ.ಗೂ ಅಧಿಕ ಹಣ ಹೋಗಿದೆ,ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದು ‌ತಿರುಗೇಟು ನೀಡಿದರು.

ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದು ಟೀಕಾಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ ಎಂದು ಅಶೋಕ್ ತಿಳಿಸಿದರು.

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್ Read More