ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೂಪು-ರೇಷೆ ರೂಪಿಸಿ ಯದುವೀರ್‌

ನವದೆಹಲಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರಲು ಸೂಕ್ತ ಕಾನೂನು ರೂಪು-ರೇಷೆ ರೂಪಿಸಲು ಸಂಬಂಧಪಟ್ಟ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಚಳಿಗಾಲದ ಸಂಸತ್‌ ಅಧಿವೇಶನದ ಶುಕ್ರವಾರದ ಕಲಾಪದಲ್ಲಿ ಮಾತನಾಡಿದ ಯದುವೀರ್, ಮೈಸೂರಿನಲ್ಲಿ ಎಂಡಿಎಂಎ ವಶ ಹಾಗೂ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿರುವುದು, ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು.

ಕಳೆದ ಬಾರಿಯ ಕಲಾಪದಲ್ಲಿಯೂ ಈ ವಿಷಯವನ್ನು ಪ್ರಸ್ತಾಪಿಸಿದ್ದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈಗಾಗಲೇ ಹಲವಾರು ಪ್ರಕರಣಗಳು ವರದಿಯಾಗಿದ್ದು, ಈ ಬಗ್ಗೆ ಕರ್ನಾಟಕ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ನನ್ನ ಕ್ಷೇತ್ರದ ಪ್ರಮುಖ ನಗರವಾದ ಮೈಸೂರಿನಲ್ಲಿ ಬೃಹತ್‌ ಎಂಡಿಎಂಎ ತಯಾರಿಕಾ ಘಟಕವನ್ನು ಪತ್ತೆ ಹಚ್ಚಲಾಗಿತ್ತು. ಇದನ್ನು ಕೂಡ ಪತ್ತೆ ಹಚ್ಚಿದ್ದು ನೆರೆ ರಾಜ್ಯದ ಪೊಲೀಸರು. ನಮ್ಮ ಪರಿಸ್ಥಿತಿ ಹೀಗಿದೆ. ಇಂತಹ ನಿರಂತರ ಘಟನೆಗಳಿಂದ ಸ್ಥಳೀಯ ಆರ್ಥಿಕತೆ ಮೇಲೆ ಭಾರಿ ಪರಿಣಾಮ ಬೀರುತ್ತಿದೆ ಎಂದು ಸಂಸದರು ತಿಳಿಸಿದರು.

ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪಾರಂಪರಿಕ ಹಾಗೂ ಐತಿಹಾಸಿಕ ನಗರವಾದ ಹಂಪಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ವಿದೇಶಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ, ಇದರಿಂದ ಸ್ಥಳೀಯ ವ್ಯಾಪಾರ ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ ಎಂದು ಯದುವೀರ್‌ ಹೇಳಿದರು.

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವಾಲಯವು ಪ್ರವಾಸೋದ್ಯಮ ಕ್ಷೇತ್ರಕ್ಕಾಗಿ ಹೆಚ್ಚಿನ ಭದ್ರತೆ ಹಾಗೂ ಸೌಲಭ್ಯ ಒದಗಿಸುವ ರೀತಿಯಲ್ಲಿ ನೀತಿ ರೂಪಿಸಬೇಕಾದ ಅಗತ್ಯವಿದೆ ಈ‌ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರವಾಸೋದ್ಯಮ ತಾಣಗಳಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯ ಒದಗಿಸಲು ಸಹ ಕ್ರಮ ಕೈಗೊಳ್ಳಬೇಕು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ಭರವಸೆ ಇದೆ ಎಂದು ಯದುವೀರ್‌ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೂಪು-ರೇಷೆ ರೂಪಿಸಿ ಯದುವೀರ್‌ Read More

ಭದ್ರತೆ ನೆಪದಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಕೊಡಬೇಡಿ- ತೇಜಸ್ವಿ ಮನವಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲು ಪೊಲೀಸ್ ಅಧಿಕಾರಿಗಳು ಕೆಲ ಕಠಿಣ ಕ್ರಮ ಕೈಗೊಂಡಿರುವುದನ್ನು ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಸ್ವಾಗತಿಸಿದ್ದಾರೆ.

ಮೈಸೂರಿನಲ್ಲಿ ಕೆಲ ದಿನಗಳ ಹಿಂದೆ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿ ಒಬ್ಬನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು ಮತ್ತು ಅದಾದ ಎರಡು ದಿನಗಳಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಕೊಲೆ ನಡೆದಿತ್ತು.

ಇದಾದ ಮೇಲೆ ಪೋಲಿಸ್ ಇಲಾಖೆ ನಗರದಾದ್ಯಂತ ಬಿಗಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾತ್ರಿ ೧೦, ೧೦:೩೦ ರ ನಂತರ ಯಾವುದೇ ಸ್ಥಳದಲ್ಲಿ ಗುಂಪು ಗುಂಪಾಗಿ ಜನ ಸೇರಿದಂತೆ ಕ್ರಮ ಕೈಗೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ‌ ಎಂದು ತೇಜಸ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ ಭದ್ರತೆ ಹೆಸರಲ್ಲಿ ರಸ್ತೆ ಬದಿ ವ್ಯಾಪಾರ ಮಾಡುವವರಿಗೆ ಮತ್ತು ಹೋಟೆಲ್ ನವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಅನೇಕ ವ್ಯಾಪಾರಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರಸ್ತೆ ಬದಿ ವ್ಯಾಪಾರ ಮಾಡಿಯೇ ಬಹಳ ಮಂದಿ ಬದುಕು ಕಟ್ಟಿಕೊಂಡಿದ್ದಾರೆ.ಅಂತವರ ಮೇಲೆ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ.ಬೀದಿ ಬದಿ ವ್ಯಾಪಾರ ಮಾಡುವವರು ಮತ್ತು ಹೋಟೆಲ್ ನವರಿಗೆ ರಿಯಾಯಿತಿ ನೀಡಬೇಕು, ಒತ್ತಾಯ ಪೂರ್ವಕವಾಗಿ ಕ್ರಮ ಕೈಗೊಳ್ಳ‌ಬಾರದೆಂದು ತೇಜಸ್ವಿ ನಾಗಲಿಂಗಸ್ವಾಮಿ ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.

ಬಾರ್ ಗಳು, ನಿರ್ಜನ ಪ್ರದೇಶದಲ್ಲಿ ಗುಂಪುಗಟ್ಟುವ ಯುವಕರ ಮೇಲೆ ನಿರ್ಬಂಧ ಹೇರುವುದರಿಂದ ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಪೋಲಿಸ್ ಇಲಾಖೆಯ ಕಟ್ಟು ನಿಟ್ಟಿನ ಕ್ರಮ ದಿಂದ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರಿಗೆ ಹೋಟೆಲ್ ವ್ಯಾಪಾರಸ್ಥರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಕೋರಿದ್ದಾರೆ.

ಭದ್ರತೆ ನೆಪದಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಕೊಡಬೇಡಿ- ತೇಜಸ್ವಿ ಮನವಿ Read More