ಜನರಿಗೆ ವಿದ್ಯುತ್ ಶಾಕ್ ನೀಡಿದ ಸರ್ಕಾರ

ಬೆಂಗಳೂರು: ಹಾಲಿನ ದರ,ಬಸ್ ಟಿಕೆಟ್‌ ದರ
ಹೀಗೆ ಎಲ್ಲಾ‌ ಬೆಲೆ ಏರಿಕೆ ಮಧ್ಯೆ ಈಗ ವಿದ್ಯುತ್ ಶಾಕ್ ನೀಡಲು‌ ಸರ್ಕಾರ ಮುಂದಾಗಿದೆ.

ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಮೇಲೆ ಸರ್ಕಾರ ಬರೆ ಹಾಕುತ್ತಿದೆ.

ಸಿಬ್ಬಂದಿಯ ಪಿಂಚಣಿ ದುಡ್ಡಿಗಾಗಿ ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಏರಿಕೆ ಮಾಡಿದೆ.

ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಅಸ್ತು ಎಂದಿದ್ದು ಇದೇ ಏಪ್ರಿಲ್‌ನಿಂದ ದರ ಏರಿಕೆ ಜಾರಿಯಾಗಲಿದೆ.

ಇಂಧನ ಪೂರೈಕೆ ಕಂಪನಿಗಳಿಗೆ (ಎಸ್ಕಾಂಗಳು) ಬುಧವಾರವೇ ಕೆಇಆರ್‌ಸಿ ಗ್ರಾಹಕರಿಂದ ಸರ್ಕಾರದ ಪಿಂಚಣಿ ಮತ್ತು ಗ್ರಾಚ್ಯುಟಿ ಕೊಡುಗೆಗಳ ಪಾಲನ್ನು ವಸೂಲಿ ಮಾಡಲು ಅವಕಾಶ ನೀಡಿ ಆದೇಶ ಪ್ರಕಟಿಸಿದೆ.

ಈ ವರ್ಷಕ್ಕೆ ಮಾತ್ರವಲ್ಲದೆ 2026-27 ಮತ್ತು 2027-28ರ ಆರ್ಥಿಕ ವರ್ಷಕ್ಕೂ ಪಿಂಚಣಿ ಮತ್ತು ಗ್ರಾಚ್ಯುಟಿ ಕೊಡುಗೆಗಳನ್ನು ಪರಿಷ್ಕರಣೆ ಮಾಡಲಾಗಿದೆ. ಇದರಿಂದಾಗಿ ಮುಂದಿನ ವರ್ಷಗಳಿಗೆ ಗ್ರಾಹಕರು ಕ್ರಮವಾಗಿ 35 ಪೈಸೆ ಮತ್ತು 34 ಪೈಸೆ ಪಾವತಿಸಬೇಕಾಗುತ್ತದೆ. ನೀರಾವರಿ ಪಂಪ್‌ಸೆಟ್, ವಿದ್ಯುತ್ ಬಳಕೆದಾರರು ಸೇರಿದಂತೆ ಎಲ್ಲಾ ಗ್ರಾಹಕರಿಂದಲೂ ವಸೂಲಿಗೆ ನಿರ್ಧಾರ ಮಾಡಲಾಗಿದೆ.

ಪಿಂಚಣಿ ಗ್ರಾಚ್ಯುಟಿ ನೆಪದಲ್ಲಿ 36 ಪೈಸೆ ಹೆಚ್ಚಳ ಮಾಡಿದ್ದರಿಂದ ಒಂದು ಮನೆಗೆ ಅಂದಾಜು 90 ರೂ. ವಿದ್ಯುತ್ ಬಿಲ್ ಹೆಚ್ಚಳವಾಗುವುದು ಗ್ಯಾರಂಟಿ.

ಜನರಿಗೆ ವಿದ್ಯುತ್ ಶಾಕ್ ನೀಡಿದ ಸರ್ಕಾರ Read More

ಜನ ಸಾಮಾನ್ಯರಿಗೆ ಕೈಗೆಟುಕದಂತಾದ ಚಿನ್ನ

ಮುಂಬೈ: ಹೆಣ್ಣುಮಕ್ಕಳ ಅತಿ ನೆಚ್ಚಿನ ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರಿಗೆ ಕೈಗೆಟುಕದಂತಾಗಿದೆ.

ಮುಂಬೈನ ಸ್ಪಾಟ್ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ10 ಗ್ರಾಂಗೆ 90,500 ರಿಂದ ರೂ. 90,800 ರೂಪಾಯಿಗಳವರೆಗೂ ವಹಿವಾಟಾಗುತ್ತಿದೆ.

ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿ ಪ್ರತಿ ಔನ್ಸ್‌ಗೆ $3,000 ದಾಟಿದ ಅಂತರರಾಷ್ಟ್ರೀಯ ಚಿನ್ನದ ಬೆಲೆಗಳು ದೇಶೀಯ ಬೇಡಿಕೆಯ ಮೇಲೆ ಪರಿಣಾಮ ಬೀರಿವೆ.

ಮದುವೆ ಸೀಸನ್ ಪ್ರಾರಂಭವಾಗಿದೆ,ಇತ್ತ ಚಿನ್ನದ ಬೆಲೆ ಏರುತ್ತಲೇ ಇದೆ, ಪ್ರಸ್ತುತ ಹೆಚ್ಚಿನ ಬೆಲೆಗಳಲ್ಲಿ, ಪರಿಮಾಣದ ದೃಷ್ಟಿಯಿಂದ ಚಿನ್ನದ ಅತಿದೊಡ್ಡ ಖರೀದಿದಾರ ಸಮುದಾಯವಾಗಿರುವ ಕಡಿಮೆ ಮತ್ತು ಮಧ್ಯಮ-ಆದಾಯದ ಜನರಿಗೆ, ಚಿನ್ನ ಕೈಗೆಟುಕುತ್ತಿಲ್ಲ

ಐಐಎಂ ಅಹಮದಾಬಾದ್‌ನ ಇಂಡಿಯನ್ ಗೋಲ್ಡ್ ಪಾಲಿಸಿ ಸೆಂಟರ್ 2022 ರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಶ್ರೀಮಂತರು ಮಾತ್ರ ಚಿನ್ನವನ್ನು ಖರೀದಿಸುತ್ತಾರೆ ಎಂಬ ಸಾಮಾನ್ಯ ಗ್ರಹಿಕೆಗೆ ವ್ಯತಿರಿಕ್ತವಾಗಿ, ಶೇಕಡಾ 56 ರಷ್ಟು ಚಿನ್ನವನ್ನು ವಾರ್ಷಿಕವಾಗಿ 2 ಲಕ್ಷದಿಂದ ರೂ. 10 ಲಕ್ಷದವರೆಗೆ ಗಳಿಸುವ ಜನರೂ ಕೂಡಾ ಖರೀದಿಸಿದ್ದಾರೆ.

2022 ರಿಂದ, ಚಿನ್ನದ ಬೆಲೆ ದ್ವಿಗುಣಗೊಂಡಿದೆ, ಆದರೆ ಈ ವರ್ಗದ ಖರೀದಿದಾರರ ಉಳಿತಾಯವು ದ್ವಿಗುಣಗೊಂಡಿಲ್ಲ, ಹೆಚ್ಚಿನ ಚಿನ್ನವನ್ನು ಖರೀದಿಸುವ ಅವರ ಸಾಮರ್ಥ್ಯವನ್ನು ಚಿನ್ನದ ದರ ಏರಿಕೆ ಕಡಿಮೆ ಮಾಡುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಟ್ಟಾರೆ‌ ಬಡ ಜನತೆ ಮಕ್ಕಳ ವಿವಾಹ ಮತ್ತಿತರ ಹಬ್ಬ-ಹರಿದಿನಗಳಿಗೆ ಚಿನ್ನ ಖರೀದಿಸುವುದನ್ನೆ ಮರೆಯಬೇಕಿದೆ.

ಜನ ಸಾಮಾನ್ಯರಿಗೆ ಕೈಗೆಟುಕದಂತಾದ ಚಿನ್ನ Read More

ಮೆಟ್ರೋ ಪ್ರಯಾಣ ದರ ಹೆಚ್ಚಳ:,ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ವಿರೋಧಿಸುತ್ತಿರುವ ಬಿಜೆಪಿ ನಾಯಕರು ಸುಳ್ಳು ಮತ್ತು ತಿರುಚಿದ ಮಾಹಿತಿ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ‌ ಬಗ್ಗೆ ಮುಖ್ಯ ಮಂತ್ರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದು ತಿಳಿಸಿದ್ದಾರೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಟೀಕಿಸಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು ಎಂದು ಪ್ರಶ್ನಿಸಿದ್ದಾರೆ.

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.
2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ ಎಂದು ಸಿಎಂ ಸ್ಪಷ್ಟ ಪಡಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳ:,ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ Read More