ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳು ಇತ್ಯರ್ಥ- ಜಿ. ಪ್ರಭಾವತಿ

ಚಾಮರಾಜನಗರ: ಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ವಾಜ್ಯಪೂರ್ವ ಪರಿಹಾರ (ಎ.ಡಿ.ಆರ್) ಕೇಂದ್ರದಲ್ಲಿ ಈ ವಿಷಯ ತಿಳಿಸಿದ ಅವರು ಕಳೆದ ಬಾರಿಯ ಲೋಕ್ ಅದಾಲತ್‍ನಲ್ಲಿ 1,01,431 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿತ್ತು ಎಂದು ಹೇಳಿದರು.

ಸೆ.13 ರಂದು ನಡೆದ ಅದಾಲತ್‍ನಲ್ಲಿ 2672 ನ್ಯಾಯಾಲಯ ಪ್ರಕರಣಗಳು ಹಾಗೂ 1,01,977 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 1,04,649 ಪ್ರಕರಣಗಳು ಇತ್ಯರ್ಥವಾಗಿವೆ. ಹೆಚ್ಚುವರಿಯಾಗಿ 3218 ಪ್ರಕರಣಗಳನ್ನು ಪರಿಹರಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ‘ಸರ್ವರಿಗೂ ನ್ಯಾಯ’ ಪರಿಕಲ್ಪನೆಯಡಿ ಜನಸಾಮಾನ್ಯರ ಅನುಕೂಲಕ್ಕಾಗಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಜಿಲ್ಲೆಯ ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಎಲ್ಲಾ ರೀತಿಯ ಸಿವಿಲ್, ರಾಜಿಯೋಗ್ಯ ಕ್ರಿಮಿನಲ್ ಪ್ರಕರಣಗಳು, ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಲು ಮೆಗಾ-ಲೋಕ್ ಅದಾಲತ್ ಏರ್ಪಡಿಸಲಾಗಿತ್ತು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಚಾಮರಾಜನಗರದ 440, ಯಳಂದೂರು 308, ಕೊಳ್ಳೇಗಾಲ 1405 ಹಾಗೂ ಗುಂಡ್ಲುಪೇಟೆಯ 519 ಸೇರಿದಂತೆ ಬಾಕಿ ಇದ್ದ 2672 ನ್ಯಾಯಾಲಯದ ಪ್ರಕರಣಗಳು ಮತ್ತು ಚಾಮರಾಜನಗರದ 56268, ಯಳಂದೂರಿನ 2849, ಕೊಳ್ಳೆಗಾಲ 17931 ಹಾಗೂ ಗುಂಡ್ಲುಪೇಟೆಯ 24929 ಸೇರಿದಂತೆ ಒಟ್ಟು 1,01,977 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದ ಒಟ್ಟು 1,04,649 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಚೆಕ್ಕು ಅಮಾನ್ಯ ಪ್ರಕರಣಗಳು, ಎಂ.ಇ.ಸಿ ಹಾಗೂ ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ಒಟ್ಟು 12,72,69,860 ರೂ. ಗಳನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು ‌

ರಾಜಿ ಯೋಗ್ಯ ಪ್ರಕರಣಗಳ ಇತ್ಯರ್ಥಕ್ಕಾಗಿ ಜನಸಾಮಾನ್ಯರು ಲೋಕ್ ಅದಾಲತ್‍ಗಾಗಿ ಕಾಯುವ ಅವಶ್ಯವಿಲ್ಲ. ಇದಕ್ಕಾಗಿ ನ್ಯಾಯಾಲಯದಲ್ಲಿ ಇದೇ ಮೊದಲಬಾರಿಗೆ ಮಧ್ಯಸ್ಥಿಕೆ ಶಿಬಿರ ಏರ್ಪಡಿಸಲಾಗಿದೆ. ಮಧ್ಯಸ್ಥಿಕೆ ಶಿಬಿರವು ಉಭಯ ಪಕ್ಷಾಕಾರರಿಗೂ ನ್ಯಾಯ ದೊರೆಯಲು ನಿರಂತರವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಅದಾಲತ್ ಯಶಸ್ಸಿಗೆ ಕಾರಣರಾದ ಜಿಲ್ಲಾಡಳಿತ, ವಿವಿಧ ಇಲಾಖೆಗಳು, ಬ್ಯಾಂಕ್‍ಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು ತಿಳಿಸಿದರು.

ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಡಿ. ಪ್ರಕಾಶ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳು ಇತ್ಯರ್ಥ- ಜಿ. ಪ್ರಭಾವತಿ Read More

ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 6,505 ಪ್ರಕರಣ ಇತ್ಯರ್ಥ

ಮೈಸೂರು: ಮೈಸೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 6,505 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅವರ ನಿರ್ದೇಶನದಂತೆ ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ ಹಮ್ಮಿಕೊಳ್ಳಲಾಯಿತು.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,18,974 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 58,688 ಸಿವಿಲ್ ಪ್ರಕರಣಗಳು ಹಾಗೂ 60,286 ಕ್ರಿಮಿನಲ್ ಪ್ರಕರಗಳು.

ಸದರಿ ಪ್ರಕರಣಗಳಲ್ಲಿ 19,363 ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 9,126 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 6,505 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.

ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 31 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾದರು.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟಾರೆ 6,505 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿವೆ.

ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು 36,36,02,361ರೂ ಗಳು ಇತ್ಯರ್ಥವಾಗಿದೆ.

ಇದಕ್ಕೆ ಸಹಕರಿಸಿದ ವಕೀಲರ ಸಂಘದ ಪದಾಧಿಕಾರಿಗಳು, ಎಲ್ಲಾ ವಕೀಲರುಗಳು ಹಾಗೂ ಕಕ್ಷಿಗಾರರು, ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಎಲ್ಲಾ ಇಲಾಖೆಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 6,505 ಪ್ರಕರಣ ಇತ್ಯರ್ಥ Read More