ಡಿವೈಡರ್ ಗೆ ಬಸ್ ಡಿಕ್ಕಿ:ಇಬ್ಬರು ಸಾ*ವು

ವಿಜಯನಗರ: ಲಾರಿಯನ್ನು ಓವರ್ ಟೇಕ್ ಮಾಡಲು ಹೋದ‌ ಬಸ್ ಡ್ರೈವರ್ ನಿಯಂತ್ರಣ ‌ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ‌ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.

ಕೂಡ್ಲಿಗಿ ತಾಲೂಕಿನ ಬಿಸ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ನಡೆದಿದ್ದು, ಇಬ್ಬರು ಸಾವನ್ನಪ್ಪಿದರೆ 8 ಮಂದಿ ಗಾಯಗೊಂಡಿದ್ದಾರೆ.

ಮನೋಜ್ (28) ಮತ್ತು ಸುರೇಶ್ (45) ಮೃತಪಟ್ಟ ದುರ್ದೈವಿಗಳು, ಗಾಯಗೊಂಡವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೂಡ್ಲಿಗಿ ಡಿ ವೈ ಎಸ್‌ ಪಿ ಮಲ್ಲೇಶ್ ದೊಡ್ಮನಿ, ಕೊಟ್ಟೂರು ಸಿಪಿಐ ದುರುಗಪ್ಪ, ಮತ್ತು ಎಸ್‌ ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾನಹೊಸಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.

ಡಿವೈಡರ್ ಗೆ ಬಸ್ ಡಿಕ್ಕಿ:ಇಬ್ಬರು ಸಾ*ವು Read More

ಕೃಷ್ಣಾ ಮೇಲ್ದಂಡೆ ಯೋಜನೆ 3ನೆ ಹಂತ:ವಾರದಲ್ಲಿ ಭೂ ಪರಿಹಾರಕ್ಕೆ ದರ ನಿಗದಿ-ಸಿಎಂ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ಆಯೋಜಿಸಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದು ಸಿಎಂ ಹೇಳಿದರು.

ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ, ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಉತ್ತರಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೆ ಹಂತ:ವಾರದಲ್ಲಿ ಭೂ ಪರಿಹಾರಕ್ಕೆ ದರ ನಿಗದಿ-ಸಿಎಂ Read More

ಪ್ರಾಣಿ ಹಿಂಸೆ ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ: ಸಿಎಂ

ವಿಜಯನಗರ: ಚಾಮರಾಜಪೇಟೆಯಲ್ಲಿ ಹಸುಗಳಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ನಂತರ
ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ, ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ತಿಳಿಸಿದರು.

ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿದೆಯಲ್ಲ ಎಂಬ ಇನ್ನೊಂದು ಪ್ರಶ್ನೆಗೆ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದೆ, ವರದಿ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಾಣಿ ಹಿಂಸೆ ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ: ಸಿಎಂ Read More