ಬೆಳಗಾವಿ: ಟಿಪ್ಪರ್ ಲಾರಿಗೆ ಹಿಂದಿನಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ
ಜಿಲ್ಲೆಯ ಹುಕ್ಕೇರಿ ತಾಲೂಕು ಸಂಕೇಶ್ವರ ಸಮೀಪ ನಡೆದಿದೆ.
ಈ ಅಪಘಾತದಲ್ಲಿ 12 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಸಂಕೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅವಘಡ ಸಂಭವಿಸಿದೆ.
ಗಂಗಾವತಿಯಿಂದ ಬೆಳಗಾವಿ ಮೂಲಕ ಕೊಲ್ಹಾಪುರಕ್ಕೆ ಸಂಚರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್,
ಟಿಪ್ಪರ್ ನ ಹಿಂಭಾಗಕ್ಕೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಯಗೊಂಡವರನ್ನು ತಕ್ಷಣ ಸಂಕೇಶ್ವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು,ಕೆಲವು ಗಾಯಾಳುಗಳನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕೇಶ್ವರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
