ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ನಿಖಿಲ್, ನಮ್ಮ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಹೇಳಿದ್ದಾರೆ.
ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಚಿವರು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು ಎಂದು ಕೋರಿದ್ದೇನೆ ಎಂದು ಹೇಳಿದರು.
ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ 320 ರೂ ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ 265 ರೂ ಇದೆ. ಕಡಿಮೆ ಬೆಲೆಯಿಂದಗಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದರು.
ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿ ಮನವಿ ಮಾಡಲಾಗಿದೆ ಎಂದು ನಿಖಿಲ್ ಮಾಹಿತಿ ನೀಡಿದರು.
ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ನಿಖಿಲ್ ಸ್ಪಷ್ಟಪಡಿಸಿದರು.
ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಲ್ಲೇಶ್ ಬಾಬು,
ಮಾಜಿ ಸಚಿವ ಸಾ.ರಾ.ಮಹೇಶ್, ಹುಣಸೂರು ಶಾಸಕ ಜಿ.ಟಿ.ಹರೀಶ್ ಗೌಡ ಹಾಗೂ ತಂಬಾಕು ಬೆಳೆಗಾರರು ಈ ವೇಳೆ ಹಾಜರಿದ್ದರು.
