ಮೈಸೂರು: ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಂಡ ಪ್ರಗತಿಶೀಲ ಸಮಾಜವನ್ನು ನಿರ್ಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಕರೆ ನೀಡಿದರು.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೈಸೂರು ನಗರ ಮತ್ತು ತಾಲ್ಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಸತ್ಯ, ಧರ್ಮ, ನ್ಯಾಯ, ತ್ಯಾಗ, ಸಹೋದರ ಪ್ರೀತಿ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದೆ. ಶ್ರೀರಾಮನ ಕರ್ತವ್ಯನಿಷ್ಠೆ, ಭರತನ ತ್ಯಾಗ ಮತ್ತು ಲಕ್ಷ್ಮಣನ ಸಹೋದರ ಪ್ರೀತಿ ಇಂದಿಗೂ ಸಮಾಜಕ್ಕೆ ಆದರ್ಶವಾಗಿವೆ. ಜನರ ಹಿತಕ್ಕೆ ಆದ್ಯತೆ ನೀಡುವ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ರಾಮರಾಜ್ಯದ ಪರಿಕಲ್ಪನೆ ಪ್ರಜಾಪ್ರಭುತ್ವದ ಆಡಳಿತಕ್ಕೂ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.
ಶೌರ್ಯ, ಸಾಹಸ, ಸ್ವಾಭಿಮಾನ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಹೆಸರಾದ ವಾಲ್ಮೀಕಿ ನಾಯಕ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಬಲವಾದ ಅಡಿಪಾಯವಾಗಿದೆ. ಯುವಜನರಿಗೆ ಗುಣಮಟ್ಟದ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಾಧನೆಗೆ ಅಗತ್ಯವಾದ ಪ್ರೋತ್ಸಾಹ ನೀಡಬೇಕು. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಸಚಿವರು ತಿಳಿಸಿದರು.
ಪರಿಶಿಷ್ಟ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೈಸೂರಿನಲ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಹೊಸ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆ ಸ್ಥಾಪಿಸುವ ಕಾರ್ಯವೂ ಪ್ರಗತಿಯಲ್ಲಿದೆ. ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಪ್ರತಿಮೆಯನ್ನು ಕೆತ್ತುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಜಿ.ಟಿ. ದೇವೇಗೌಡ, ಶ್ರೀ ಹರೀಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಶ್ರೀ ತಿಮ್ಮಯ್ಯ, ಶ್ರೀ ಸಿ.ಎನ್. ಮಂಜೇಗೌಡ, ಶ್ರೀ ಬಸವರಾಜ್, ಶ್ರೀ ರಘು ಕೌಟಿಲ್ಯ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ನರೇಂದ್ರ, ತುಮಕೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಮುಖ್ಯ ಭಾಷಣಕಾರರಾದ ನಾಗಭೂಷಣ ಬಗ್ಗನಾಡು, ಪುಷ್ಪಾ ಅಮರನಾಥ್, ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
