ಮೇಲುಕೋಟೆಗೆ ನ.9ಕ್ಕೆ ಉಪರಾಷ್ಟ್ರಪತಿ:ಅಗತ್ಯ ಸಿದ್ದತೆಗೆ ಡಿಸಿ ಸೂಚನೆ

ಮಂಡ್ಯ: ಪುರಾಣ ಪ್ರಸಿದ್ಧ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು‌ ಆದೇಶಿಸಿದರು.

ಮಾರ್ಗಸೂಚಿಯಂತೆ ಅಧಿಕಾರಿಗಳು ಕೆಲಸ ನಿರ್ವಹಣೆ ಮಾಡಬೇಕು. ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕೆಂದು ತಿಳಿಸಿದರು.

ನಿರಂತರವಾಗಿ ವಿದ್ಯುತ್ ಸಂಪರ್ಕ, ಇಂಟರ್ ನೆಟ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು,ಎಲ್ಲೂ ಸ್ವಲ್ಪ ಕೂಡಾ ಲೋಪ ಆಗದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.

ಸುಸ್ಸಜ್ಜಿತ ಅಂಬುಲೆನ್ಸ್ ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು, ಸ್ಥಳದಲ್ಲಿ ಹಸಿರು ಕೊಠಡಿಯಲ್ಲಿ ಗಣ್ಯರಿಗೆ ಬೇಕಾಗುವ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿಶಾಮಕ ದಳ, ಹೆಲಿಪ್ಯಾಡ್ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಶಿಷ್ಟಾಚಾರ ದಂತೆ ಅಗತ್ಯ ಕ್ರಮ ವಹಿಸಬೇಕೆಂದು‌ ಡಿಸಿ ಆದೇಶಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಸ್ಥಳ ಪರಿಶೀಲನೆ
ಸಭೆಗೂ ಮುನ್ನ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆಲಿಪ್ಯಾಡ್‌ಗೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಡಾ.ಶ್ರೀನಿವಾಸ್, ಪಾಂಡವಪುರ ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್.ಪಿ ಶಾಂತಮಲ್ಲಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.