ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತೆ ವಹಿಸಿ-ಜಿ ಲಕ್ಷ್ಮೀಕಾಂತ ರೆಡ್ಡಿ

Spread the love

ಮೈಸೂರು, ಮಾ.4: ಬೇಸಿಗೆ ದಿನಗಳು ಹತ್ತಿರವಾಗುತ್ತಿದೆ, ಈ ಸಂಬಂಧ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅರಣ್ಯ ಬೆಂಕಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪೂರ್ವಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಅರಣ್ಯ ಹಾಗೂ ಅಗ್ನಿ ಶಾಮಕ ಇಲಾಖೆಯವರ ಉತ್ತಮ ಸಮನ್ವಯತೆಯಿಂದ ಅನಾಹುತ ಆಗದಂತೆ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಈಗಲೂ ಅರಣ್ಯದಲ್ಲಿ ಬೆಂಕಿ ಸಂಭವಿಸದ ಹಾಗೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅನಿವಾರ್ಯ ಸಂದರ್ಭದಲ್ಲಿ ಅರಣ್ಯ ಬೆಂಕಿ ಕಾಣಿಸಿಕೊಂಡರೆ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಸಿಬ್ಬಂದಿಗಳು ಸಜ್ಜಾಗಿರಬೇಕು ಎಂದು ತಿಳಿಸಿದರು.

ಮಹಾರಾಣಿ ಕಾಲೇಜು ಕಟ್ಟಡ ಕುಸಿದ ಸಂದರ್ಭದಲ್ಲಿ, ಟಿ ನರಸೀಪುರ ಕುಂಭಮೇಳ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಗ್ನಿ ಶಾಮಕ ಇಲಾಖೆಯ ಅಧಿಕಾರಿಗಳಾದ ಚಂದನ್ ಹಾಗೂ ಗುರುರಾಜ್ ಅವರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಯ ಉಪಕರಣಗಳ ಖರೀದಿಗೆ ಹಾಗೂ ವಾಹನಗಳ ಖರೀದಿಗೆ ಅನುದಾನ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜನರು ಬೆಂಕಿ ಕಾಣಿಸಿಕೊಂಡರೆ ತಕ್ಷಣ ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಕಾಡಂಚಿನ ಪ್ರದೇಶಗಳ ಜನರು ಬಿಡಿ ಸಿಗರೇಟ್ ಸೇವನೆ ಮಾಡಿ ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವ ಹೆಚ್ಚು ಇರುತ್ತದೆ. ಅರಣ್ಯ ಬೆಂಕಿ ಕಾಣಿಸಿಕೊಳ್ಳದ ಹಾಗೆ ತಡೆಯಲು ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮಾಲತಿ ಪ್ರಿಯಾ ಅವರು ಮಾತನಾಡಿ ಕಳೆದ ವಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಸಿಕೊಂಡಿತ್ತು. ಆದರೆ ಅಗ್ನಿ ಶಾಮಕ ಇಲಾಖೆಯ ಸಹಕಾರದಿಂದ ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಇದ್ದು ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಯಿತು. ವಾಚ್ ಟವರ್ ಗಳನ್ನು ಮಾಡಿಕೊಂಡು ಅಲ್ಲಿ ಸಿಬ್ಬಂದಿ ಇದ್ದು ವಾಚ್ ಮಾಡುತ್ತಾರೆ. ಬೆಂಕಿ ಕಾಣಿಸಿಕೊಂಡರೆ ಅರಿಸಲು ನೀರು ಅತ್ಯಗತ್ಯ. ಆದ್ದರಿಂದ ನೀರು ಲಭ್ಯವಿರುವ ಸ್ಥಳಗಳನ್ನು ಗುರುತಿಸಿಕೊಳ್ಳಾಗಿದೆ. ಇನ್ನು ಹೆಚ್ಚು ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಣೆ ಮಾಡಲು ಜಿಲ್ಲಾ ವಿಪತ್ತು ನಿರ್ವಹಣೆ ಯಡಿ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ ಕೆ.ಎನ್. ಬಸವರಾಜು ಅವರು ಮಾತನಾಡಿ ಅರಣ್ಯ ಬೆಂಕಿಯನ್ನು ತಡೆಯಲು ವಾಚ್ ಟವರ್ ಗಳನ್ನು ನಿರ್ಮಿಸಲಾಗಿದೆ. ಅಗ್ನಿ ಶಾಮಕ ಇಲಾಖೆಯ ಜೊತೆ ಸಂಪರ್ಕದಲ್ಲಿ ಇರುತ್ತೇವೆ. ಬೆಂಕಿ ಕಂಡುಬರುವ ಪ್ರದೇಶಗಳನ್ನು ಗುರುತಿಸಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.