ಮೈಸೂರು: ಯುವಜನೋತ್ಸವ ಯುವಜನರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.
ತಮ್ಮಲ್ಲಿರುವ ಪ್ರತಿಭೆ, ಕೌಶಲ್ಯಗಳನ್ನು ಪ್ರದರ್ಶಿಸಲು ಯುವಜನತೆ ಈ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ರಾಷ್ಟ್ರೀಯ ಸೇವಾ ಯೋಜನೆ ಮತ್ತಿತರ ಸಂಸ್ಥೆಗಳು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುವ ಜನೋತ್ಸವ ಕಾರ್ಯಕ್ರಮಗಳಲ್ಲಿ ಹಾಗೂ ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆಗಳನ್ನು ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕರು ಕರೆ ನೀಡಿದರು.
ಜಗತ್ತಿನಲ್ಲಿ ಭಾರತದಲ್ಲಿರುವ ಯುವಕ ಯುವತಿಯರ ಸಂಖ್ಯೆ ಬೇರೆ ಯಾವುದೇ ದೇಶದಲ್ಲಿ ಇಲ್ಲ. ದೇಶದ ಯುವ ಶಕ್ತಿಯನ್ನು ಮಾನವ ಸಂಪನ್ಮೂಲವಾಗಿ ಪರಿವರ್ತಿಸಬೇಕು. ಯುವಕರಿಗೆ ಪ್ರೋತ್ಸಾಹ ಕೊಡುವ ದೃಷ್ಟಿಯಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯುವಕ ಯುವತಿಯರ ಮನಸ್ಸಿನಲ್ಲಿರುವ ಭಾವನೆಗಳನ್ನು ಅರ್ಥೈಸಿಕೊಂಡು, ಅದಕ್ಕೆ ಪೂರಕವಾದ ಸ್ಪರ್ಧಾತ್ಮಕ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರನ್ನು ಈ ರಾಷ್ಟ್ರದ ಸಂಪತ್ತನ್ನಾಗಿ ಪರಿವರ್ತಿಸಬಹುದು ಎಂದು ತನ್ವೀರ್ ಸೇಠ್ ತಿಳಿಸಿದರು.
ಪ್ರತಿಯೊಬ್ಬರೂ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಬೇಕು. ಸಾಧನೆ ಇಲ್ಲದೆ ಬದುಕು ಕಟ್ಟಿಕೊಳ್ಳುವುದು ಸಾರ್ಥಕತೆಯಲ್ಲ. ಪ್ರತಿಯೊಬ್ಬರಿಗೂ ಯಾವುದಾದರೊಂದು ಪ್ರತಿಭೆ ಇದ್ದೇ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಮುಖ್ಯವಲ್ಲ,ಭಾಗವಹಿಸುವಿಕೆ ಬಹಳ ಮುಖ್ಯ. ಸ್ಪರ್ಧೆಯಲ್ಲಿ ಗೆದ್ದವರಿಗೆ ಯಶಸ್ಸು ಸಿಗುತ್ತದೆ, ಸೋತವರಿಗೆ ಮತ್ತೆ ಗೆಲ್ಲುವಂತಹ ಧೈರ್ಯ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಎಸ್ ಜವರೆ, ಮೈಸೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಎಂ.ಬಿ ಸುರೇಶ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಬ್ದುಲ್ ರಹಿಮಾನ್ ಎಂ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ರಾಷ್ಟ್ರ ಪ್ರಶಸ್ತಿ ವಿಜೇತರಾದ ಇಮ್ರಾನ್ ಬೇಗ್, ವಿವಿಧ ಕಾಲೇಜಿನ ಸ್ಪರ್ಧಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.